ಚಿತ್ರದುರ್ಗ: ಬೇಸಿಗೆ ಕಾಲವಿರುವುದರಿಂದ, ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿಗಾಗಿ ಮೀಸಲಿಟ್ಟ ಅನುದಾನದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಸೂಚನೆ ನೀಡಿದರು.
ನೀರಿನ ಅಭಾವವಿರುವ ಕಡೆಗಳಲ್ಲಿ ಬೋರ್‌ವೆಲ್‌ಗಳನ್ನು ಕೊರೆಯಿಸಲು ಅಗತ್ಯಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಗರಸಭೆಯ ಆರ್.ಓ ಪ್ಲಾಂಟ್‍ಗಳನ್ನು ಚಾಲನೆಯಲ್ಲಿ ಇಟ್ಟು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ಇ-ಆಸ್ತಿ ಹಾಗೂ ಜನನ-ಮರಣ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ಸಾರ್ವಜನಿಕರಿಗೆ ತಲುಪುವ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು. ನಗರ ವ್ಯಾಪ್ತಿಯ ಒಳಚರಂಡಿ ಯೋಜನೆ ಕುರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಚರ್ಚಿಸಿ, ಪೂರ್ಣ ಯೋಜನೆಯ ಕುರಿತು ಮತ್ತೊಮ್ಮೆ ಪಿಪಿಟಿ ಮತ್ತು ಸ್ಥಳಗಳ ವೀಕ್ಷಣೆ ಮಾಡಿ, ಆಗಿರುವ ಲೋಪದೋಷಗಳನ್ನು ಸರಿಪಡಿಸುವ ಕ್ರಮ ವಹಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಪೌರಾಯುಕ್ತೆ ರೇಣುಕಾ.ಎಂ, ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು, ಸೇರಿದಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕಚೇರಿಯ ಸಿಬ್ಬಂದಿ ಹಾಜರಿದ್ದರು.