ಚಿತ್ರದುರ್ಗ: ಕ್ರೀಡೆ ವಿದ್ಯಾರ್ಥಿಗಳ ಅವಿಭಾಜ್ಯ ಅಂಗ, ಎಲ್ಲ ಮಕ್ಕಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಿಂದ ಶಿಸ್ತು ಹಾಗೂ ಬದ್ಧತೆ ಮೂಡತ್ತದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಫೀರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ, 14 ಮತ್ತು 17 ವರ್ಷದೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ಮತ್ತು ವಿಶೇಷಚೇತನ ಮಕ್ಕಳ ಜಿಲ್ಲಾ ಮಟ್ಟದ ಮೇಲಾಟಗಳ ಕ್ರೀಡಾಕೂಟ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು - ಗೆಲುವು ಸಹಜ, ಆದರೆ ಭಾಗವಹಿಸುವುದು ಮುಖ್ಯ. ಕ್ರೀಡೆಯು ಮಕ್ಕಳಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ, ದೈಹಿಕ ಸಾಮರ್ಥ್ಯ ಹೆಚ್ಚಳದ ಜೊತೆಗೆ ಆರೋಗ್ಯವನ್ನು ಸಹ ಕಾಪಾಡುತ್ತದೆ. ಯುವಕರು ದುಶ್ಚಟಗಳಿಗೆ ದಾಸರಾಗದೆ, ಕ್ರೀಡಾಸಕ್ತಿ ಬೆಳಿಸಿಕೊಂಡು ಭಾಗವಹಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಮೂಲಕ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಆಶಯ ವ್ಯಕ್ತಪಡಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಮಾತನಾಡಿ, ಯುವಕರು ಈ ದೇಶದ ಸಂಪತ್ತು. ಹಾಗಾಗಿ ಯುವಕರು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಬೇಕು. ಶಾರೀರಿಕವಾಗಿ ಯಾರು ಸದೃಢವಾಗಿರುತ್ತಾರೋ ಅವರು ಮಾನಸಿಕವಾಗಿಯೂ ಸದೃಢರಾಗಿರುತ್ತಾರೆ. ಕ್ರೀಡೆಯು ಮಕ್ಕಳ ಶ್ರೇಯೋಭಿವೃದ್ಧಿಗೆ ತುಂಬಾ ಸಹಕಾರಿಯಾಗಲಿದೆ ಎಂದು ಹೇಳಿದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಕ್ರೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಂದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಂತೇಶ್ ಸೇರಿದಂತೆ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರು, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ತಾಲೂಕು ಮಟ್ಟದಲ್ಲಿ ವಿಜೇತರಾದ ಜಿಲ್ಲೆಯ ಆರು ತಾಲ್ಲೂಕಿನ 14 ಮತ್ತು 17 ವರ್ಷದೊಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು ಪಾಲ್ಗೊಂಡಿದ್ದರು.