ಮೈಸೂರು ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಕ್ರೀಡೆಯು ದೈಹಿಕ ಚಟುವಟಿಕೆ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ ಎಂದು ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನ ತಿಳಿಸಿದರು.
ನಗರದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 14 ರಿಂದ 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ, ಬಾಲಕಿಯರ ಮೈಸೂರು ವಿಭಾಗ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಒಳಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ. ಉತ್ತಮವಾಗಿ ಆಡಿದ ಮಕ್ಕಳನ್ನು ತೀರ್ಪುಗಾರರು ನಿಷ್ಪಕ್ಷಪಾತವಾಗಿ ಆಯ್ಕೆ ಮಾಡಬೇಕು. ವಿಭಾಗೀಯ ಮಟ್ಟದಲ್ಲಿ ವಿಜೇತ ಮಕ್ಕಳು ರಾಜ್ಯಮಟ್ಟದಲ್ಲಿಯೂ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಹೇಳಿದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಂದ್ಯಾವಳಿಯಲ್ಲಿ ಮೈಸೂರು ವಿಭಾಗದ 8 ಜಿಲ್ಲೆಗಳು ಭಾಗವಹಿಸುತ್ತಿವೆ. ಈ ಕ್ರೀಡೆಯಲ್ಲಿ ಜಯಗಳಿಸಿದ ಮಕ್ಕಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಲಿದ್ದಾರೆ. ಪೋಷಕರು ಕ್ರೀಡೆಗಳಲ್ಲಿ ಭಾಗವಹಿಸಲು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಓದಿನ ಜೊತೆಗೆ ಕ್ರೀಡೆಯನ್ನು ಮೈಗೂಡಿಸಿಕೊಂಡಲ್ಲಿ ಭವಿಷ್ಯ ಉಜ್ವಲವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಕುಮುದ, ಬಿಇಒ ಸಿ.ಹನುಮಶೆಟ್ಟಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್.ಶಂಕರ್, ಜೆಎಸ್‌ಎಸ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎನ್.ಮಹದೇವಸ್ವಾಮಿ, ಮೈಸೂರು ವಿಭಾಗೀಯ ಕಾರ್ಯದರ್ಶಿ ಹಾಗೂ ದೈಹಿಕ ಶಿಕ್ಷಣ ಉಪನಿರ್ದೇಶಕ ಪರಶುರಾಮಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಬಸವರಾಜು ಇದ್ದರು.