ಶಿವಮೊಗ್ಗ: ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕಗಳ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ರಾಜ್ಯಮಟ್ಟದ ನೌಕರರ ಕ್ರೀಡಾಕೂಟವನ್ನು ಏಪ್ರಿಲ್‌ನಲ್ಲಿ ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರು ವೇತನಾಧಾರಿತ ಬ್ಯಾಂಕ್ ಖಾತೆ ತೆರೆದು, 1.20ಕೋಟಿ ಮೊತ್ತದ ವಿಮಾ ಸೌಲಭ್ಯ ಮತ್ತು ಮಕ್ಕಳ ಶೈಕ್ಷಣಿಕ ಸೌಲಭ್ಯ, ಆಕಸ್ಮಿಕ ಅಪಘಾತ ಮುಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು. ಈಗಾಗಲೇ ಸಂಘವು ಕೈಗೊಂಡು ನಿರ್ಣಯದಂತೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅದರ ಅಧ್ಯಯನಕ್ಕಾಗಿ ಹಿರಿಯ ಅಧಿಕಾರಿ ಅಂಜುಂ ಫರ್ವೇಜ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಸಮಿತಿಯು ಶೀಘ್ರದಲ್ಲಿ ವರದಿ ಸಲ್ಲಿಸಲಿದ್ದು, ವರದಿಯಂತೆ ಸರ್ಕಾರ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಆಶಾಭಾವನೆ ಹೊಂದಲಾಗಿದೆ ಎಂದರು.ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್‌ಕುಮಾರ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್‌ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್, ಜಿಪಂ ಸಿಇಒ ಎನ್.ಹೇಮಂತ್, ಮಹಾನಗರಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಮತ್ತಿತರರಿದ್ದರು.