ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಮಡಿಕೇರಿಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟವು ಪ್ರತೀ ತಿಂಗಳು ನಡೆಯುವಂತಾಗಬೇಕು. ಸರ್ಕಾರಿ ನೌಕರರು ಪ್ರತೀ ನಿತ್ಯ ಕಚೇರಿ ಹಾಗೂ ಕುಟುಂಬದ ಒತ್ತಡ ನಡುವೆ ಕೆಲಸ ಮಾಡುತ್ತಾರೆ. ಆದ್ದರಿಂದ ಆರೋಗ್ಯ ಹಾಗೂ ಮನಃಶಾಂತಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು.ಅವರು ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜ್ಯೋತಿ ಬೆಳಗಿ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಸರ್ಕಾರಿ ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಕಚೇರಿ ಕೆಲಸಕ್ಕೆ ಮೊದಲ ಆದ್ಯತೆ ನೀಡುತ್ತಾರೆ. ಆ ನಿಟ್ಟಿನಲ್ಲಿ ಎಲ್ಲ ಒತ್ತಡಗಳನ್ನು ನಿಭಾಯಿಸಲು ಕ್ರೀಡೆ ಸಹಕಾರಿಯಾಗಿದೆ ಎಂದರು.
ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅನುಕೂಲವಾಗಲಿದೆ. ಎಲ್ಲ ಹಂತದ ನೌಕರರು ಒಟ್ಟುಗೂಡಲು ಕ್ರೀಡೆ ಸಹಕಾರಿಯಾಗಿದ್ದು, ಹಬ್ಬದ ವಾತಾವರಣದಲ್ಲಿ ಕ್ರೀಡೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಹೇಳಿದರು.ಕ್ರೀಡೆಯಿಂದ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬಹುದು. ಹಾಗೆಯೇ ತಂಡವಾಗಿ ಕಾರ್ಯನಿರ್ವಹಿಸಲು ಸಹ ಅನುಕೂಲವಾಗಲಿದೆ. ಯಾವುದೇ ಕಚೇರಿ ಅಥವಾ ಕ್ರೀಡೆಯಲ್ಲಿ ಎಲ್ಲ ಸದಸ್ಯರು ಪ್ರಮುಖ ಪಾತ್ರ ವಹಿಸುತ್ತಾರೆ. ಆ ನಿಟ್ಟಿನಲ್ಲಿ ಕ್ರೀಡೆಯಲ್ಲಿ ಪಾಲ್ಗೊಂಡು ಯಶಸ್ಸು ಸಾಧಿಸಬೇಕು ಎಂದರು.ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಅರುಣ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಭವನ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದ್ದು, ಅಗತ್ಯ ಸಹಕಾರ ನೀಡುವಂತೆ ಶಾಸಕರಲ್ಲಿ ಮನವಿ ಮಾಡಿದರು.ಇದೇ ಸಂದರ್ಭ ಸ್ಥಳದಲ್ಲಿಯೇ ಶಾಸಕರ ನಿಧಿಯಿಂದ 5 ಲಕ್ಷ ರು. ಬಿಡುಗಡೆ ಮಾಡಲಾಗುವುದು ಎಂದು ಡಾ.ಮಂತರ್ ಗೌಡ ಪ್ರಕಟಿಸಿದರು.ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಭವನವನ್ನು 5 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಆ ನಿಟ್ಟಿನಲ್ಲಿ ಎಲ್ಲ ಜನಪ್ರತಿನಿಧಿಗಳ ಸಹಕಾರ ಅತ್ಯಗತ್ಯ ಎಂದು ಕೋರಿದರು.ಆರೋಗ್ಯ ಸಂಜೀವಿನಿ ಯೋಜನೆಗೆ ಚಾಲನೆ ನೀಡಲು ಏ.21ರಂದು ರಾಜ್ಯಮಟ್ಟದಲ್ಲಿ ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಎನ್‌ಪಿಎಸ್ ರದ್ದುಗೊಳಿಸಿ, ಹಳೇ ಪಿಂಚಣಿ ಪದ್ಧತಿ ಜಾರಿಗೊಳಿಸಬೇಕು ಎಂಬ ಬಗ್ಗೆ ಹೋರಾಟ ನಡೆಯುತ್ತಿದೆ ಎಂದು ಅರುಣ್ ಕುಮಾರ್ ತಿಳಿಸಿದರು.ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೇಗೌಡ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಶಾಖೆಯ ಕಾರ್ಯದರ್ಶಿ ಪಿ.ಜಿ.ತ್ರಿಶೂಲ್, ಖಜಾಂಜಿ ಪಿ.ಡಿ.ರಾಜೇಶ್, ರಾಜ್ಯ ಪರಿಷತ್ ಸದಸ್ಯರಾದ ಪಿ.ಎಂ.ಬಾಬು, ತಾಲ್ಲೂಕು ಘಟಕದ ಅಧ್ಯಕ್ಷರಾದ ಪ್ರದೀಪ್, ಕೆ.ಎಂ.ತಿಮ್ಮಯ್ಯ, ಕಾರ್ಯಾಧ್ಯಕ್ಷರಾದ ಮೋಹನ್ ಪೆರಾಜೆ, ಗೌರವಾಧ್ಯಕ್ಷರಾದ ಎಸ್.ಟಿ.ಶಮ್ಮಿ, ಇತರರು ಇದ್ದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಜಾವಲಿನ್ ಎಸೆದು ಗಮನ ಸೆಳೆದರು. ಹಾಗೆಯೇ ಕಬಡ್ಡಿ ಕ್ರೀಡಾಕೂಟ ವೀಕ್ಷಿಸಿದರು. ಅನಿತಾ ನಿರೂಪಿಸಿದರು. ಚಿತ್ರ ಪ್ರಾರ್ಥಿಸಿದರು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧನೆ ಮಾಡಿರುವ ಕ್ರೀಡಾಪಟುಗಳನ್ನು ಶಾಸಕ ಡಾ.ಮಂತರ್ ಗೌಡ ಸನ್ಮಾನಿಸಿದರು.