ಹಾವೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ

KannadaprabhaNewsNetwork | Published : Mar 11, 2025 12:46 AM

ಸಾರಾಂಶ

ಕ್ರೀಡಾಕೂಟದಲ್ಲಿ ಸೋಲು- ಗೆಲುವು ಸಾಮಾನ್ಯ. ಎಲ್ಲರೂ ಕ್ರೀಡಾಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು.

ಹಾವೇರಿ: ಪ್ರತಿಯೊಬ್ಬರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಆರೋಗ್ಯ ಸರಿಯಾಗಿದ್ದರೆ ನಾವು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸರಿಯಾಗಿ ಮಾಡಿಕೊಡಲು ಸಹಕಾರಿಯಾಗುತ್ತದೆ. ಆದ್ದರಿದ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಕೂಟದಲ್ಲಿ ಸೋಲು- ಗೆಲುವು ಸಾಮಾನ್ಯ. ಎಲ್ಲರೂ ಕ್ರೀಡಾಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ದೈನಂದಿನ ಕೆಲಸದ ಒತ್ತಡ ನಿವಾರಣೆಗೆ ಇಂತಹ ಕ್ರೀಡಾಕೂಟಗಳು ಅವಶ್ಯವಾಗಿವೆ. ದಿನದ 24 ತಾಸುಗಳಲ್ಲಿ ಎಂಟು ಗಂಟೆ ನಿದ್ದೆ, ಎಂಟು ಗಂಟೆ ಕೆಲಸ ಹಾಗೂ ಎಂಟು ಗಂಟೆ ಕ್ರೀಡೆ, ಇತರೆ ಚಟುವಟಿಕೆಗಳಿಗೆ ಮೀಸಲಿಡುವ ಮೂಲಕ ಉತ್ತಮ ಹಾಗೂ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. ಕ್ರೀಡಾಕೂಟದಲ್ಲಿ ಭಾಗವಹಿಸುವುದರಿಂದ ಮಾನಸಿಕ ಉಲ್ಲಾಸ ಉಂಟಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಇತರರೊಂದಿಗೆ ಬೆರೆಯುವ ಅವಕಾಶ ಸಿಗುತ್ತದೆ. ಎಲ್ಲರೂ ಈ ಕ್ರೀಡಾಕೂಟದ ಸದುಪಯೋಗ ಪಡೆದುಕೊಳ್ಳಬೇಕು. ನಿತ್ಯವೂ ವ್ಯಾಯಾಮ, ಆಟೋಟ, ನಡಿಗೆ ಸೇರಿದಂತೆ ಆರೋಗ್ಯಕರ ಚಟುವಟಿಕೆಗಳನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಮಾತನಾಡಿ, ಎಲ್ಲರೂ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು. ಕಚೇರಿ ಕೆಲಸದೊಂದಿಗೆ ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಬಿ.ಎಚ್. ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್., ಜಿಪಂ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ ಕರಿಗಾರ, ಜಿಲ್ಲಾ ಘಟಕ ಪದಾಧಿಕಾರಿಗಳು, ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನಾಳೆ ಸಂಪರ್ಕ ಅಭಿಯಾನ

ರಾಣಿಬೆನ್ನೂರು: ನಗರದ ಮೆಡ್ಲೇರಿ ರಸ್ತೆಯಲ್ಲಿರುವ ಆದಿಶಕ್ತಿ ದೇವಸ್ಥಾನದಲ್ಲಿ ಮಾ. 12ರಂದು ಬೆಳಗ್ಗೆ 10ಕ್ಕೆ ವಿಶ್ವವೀರಾಂಜನೇಯ ಮಹಾಸಂಸ್ಥಾನ ಹೇಮಪುರ ಮಹಾಪೀಠದ ಭಕ್ತರ ಸಂಪರ್ಕ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಹೊನ್ನಾವರ ತಾಲೂಕಿನ ಗೇರಸೊಪ್ಪದ ಬಂಗಾರಮಕ್ಕಿಯ ಧರ್ಮಾಧಿಕಾರಿ ಮಾರುತಿ ಗುರೂಜಿ ಸಾನ್ನಿಧ್ಯ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

Share this article