ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ
ದೈಹಿಕ ಶಿಕ್ಷಣ ಶಿಕ್ಷಕರ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ ಹೇಳಿದರು.ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಹೋರಾಟದ ಫಲವಾಗಿ ಬಹು ದಿನಗಳ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಕ್ರೀಡಾಕೂಟ ಏರ್ಪಡಿಸಬೇಕೆಂಬ ಉದ್ದೇಶದಿಂದ ಸರ್ಕಾರ ಅನುಮತಿ ನೀಡಿರುವುದರಿಂದ ಇಂದು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಹೇಳಿದರು.ದೈಹಿಕ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಬೇಕೆಂಬ ಆಶಾಭಾವನೆ ವ್ಯಕ್ತಪಡಿಸಿದ್ದು, ಕ್ರೀಡೆಯಲ್ಲಿ ಪರಿಣಿತಿ ಪಡೆದು ಕ್ರೀಡಾಕೂಟದಲ್ಲಿ ಬಹಳ ಆಸಕ್ತಿಯಿಂದ ಭಾಗವಹಿಸಿದ್ದೀರಿ, ಅರಣ್ಯ, ದೈಹಿಕ, ಪೊಲೀಸ್ ಈ ಇಲಾಖೆಗಳ ನೌಕರರಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಅನುಮತಿ ಇರಲಿಲ್ಲ. ಈಗ ಸಾಮಾನ್ಯ ನೌಕರರೊಂದಿಗೆ ಒಡಗೂಡಿ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿರುವ ಬಗ್ಗೆ ಸರ್ಕಾರವನ್ನು ಅಭಿನಂದಿಸಿದರು.
ಮಕ್ಕಳಲ್ಲಿರುವ ಪ್ರತಿಭೆ ಹೊರತರಲು ದೈಹಿಕ ಶಿಕ್ಷಕರ ಶ್ರಮ ಅವಿಸ್ಮರಣೀಯ, ರಾಜ್ಯ, ರಾಷ್ಟ್ರಮಟ್ಟಕ್ಕೆ ತಂಡವನ್ನು ಆಯ್ಕೆ ಮಾಡಿ ಕಳುಹಿಸುವಲ್ಲಿ ಪರಿಶ್ರಮ ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಯು.ವಿ ಪಾಲಾಕ್ಷಮೂರ್ತಿ ಮಾತನಾಡಿ, ಜಿಲ್ಲಾಮಟ್ಟದ ಪ್ರಥಮ ಕ್ರೀಡಾಕೂಟ ಆಯೋಜನೆ ಮಾಡಲು ಸರ್ಕಾರ ಅನುಮತಿ ನೀಡಿರುವ ಬಗ್ಗೆ ಕೃತಜ್ಞತೆ ಸಲ್ಲಿಸಿದ ಅವರು, ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ ಇಲ್ಲಿ ಗೆದ್ದು ಆಯ್ಕೆಯಾದ ತಂಡ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವಂತಾಗಲಿ ಎಂದು ಹೇಳಿದರು.
ಪಾಂಡುಕುಮಾರ್ ಸ್ವಾಗತಿಸಿ, ನಾಗರಾಜ್ ನಿರೂಪಿಸಿದರು. ಪರಮೇಶ್ವರಪ್ಪ ವಂದಿಸಿದರು. 19 ಕೆಸಿಕೆಎಂ 1ಜಿಲ್ಲಾ ಆಟದ ಮೈದಾನದಲ್ಲಿ ಬುಧವಾರ ನಡೆದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ ಕ್ರೀಡಾ ಜ್ಯೋತಿ ಸ್ವೀಕರಿಸುವ ಮೂಲಕ ಉದ್ಘಾಟಿಸಿದರು.