ಕನ್ನಡಪ್ರಭ ವಾರ್ತೆ ಪಾಂಡವಪುರ
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ದೈಹಿಕ ಚಟುವಟಿಕೆಗಳು ಬಹಳ ಪ್ರಮುಖವಾಗಿವೆ. ಕಾಲೇಜು ಹಂತದಲ್ಲಿ ನಡೆಯುವ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಸಧೃಡಗೊಂಡು ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಮಟ್ಟದ ಖೋ-ಖೋ ಆಟಗಾರ್ತಿ ಹಾಗೂ ಕ್ರೀಡಾರತ್ನ ಪ್ರಶಸ್ತಿ ವಿಜೇತೆ ಎಂ.ವೀಣಾ ಹೇಳಿದರು.ತಾಲೂಕಿನ ಚಿನಕುರಳಿ ಗ್ರಾಮದ ಎಸ್.ಟಿ.ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ, ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿರಂತರ ಪರಿಶ್ರಮವು ಕ್ರೀಡೆಯಲ್ಲಿ ತಮ್ಮ ನಿರೀಕ್ಷಿತ ಗುರಿಯನ್ನು ತಲುಪಲು ಸಾಧ್ಯವಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಹೆಚ್ಚಿನ ಪರಿಶ್ರಮ ಪಡಬೇಕು ಎಂದು ಸಲಹೆ ನೀಡಿದರು.
ಎಸ್‌ಟಿಜಿ ಸಮೂಹ ಸಂಸ್ಥೆಗಳ ಆಡಳಿತಧಿಕಾರಿ ನಿವೇದಿತಾ ನಾಗೇಶ್, ವಿದ್ಯಾರ್ಥಿಗಳಿಗೆ ಶಿಕ್ಷಣ ಎಷ್ಟು ಮುಖ್ಯವೋ, ಕ್ರೀಡೆಯೂ ಸಹ ಅಷ್ಟೇ ಮುಖವಾಗಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮೊಳಿಗಿನ ಪ್ರತಿಭೆಯನ್ನು ಹೊರಹಾಕಬೇಕು ಎಂದು ತಿಳಿಸಿದರು.ಪ್ರಾಂಶುಪಾಲರು ಡಾ.ನಿಶಾಂತ್ ಎ.ನಾಯ್ಡು ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಬದ್ಧತೆ, ಸಮರ್ಪಣಾ ಮನೋಭಾವ, ಶಿಸ್ತು ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣ ಎಂದರು.
ಕಾಲೇಜಿನಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಎಸ್‌ಟಿಜಿ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹಾಗೂ ಸಂಸ್ಥೆ ಸಿಇಒ ಸಿ.ಪಿ.ಶಿವರಾಜು ಅವರು ಪ್ರೋತ್ಸಾಹ, ಬೆಂಬಲ ನೀಡುವ ಮೂಲಕ ಮಕ್ಕಳ ಪ್ರತಿಭೆ ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಕ್ರೀಡಾಕೂಟದಲ್ಲಿ ಓಟ, ಎತ್ತರ ಜಿಗಿತ, ಜಾವಲಿನ್ ಎಸೆತ, ಲಾಂಗ್ ಜಂಪ್, ಡಿಸ್ಕಸ್ ಥ್ರೋ, ಗುಂಡು ಎಸೆತ ಮತ್ತು ಹಗ್ಗ-ಜಗ್ಗಾಟದಂತಹ ಟ್ರ್ಯಾಕ್ ಸ್ಪರ್ಧೆಗಳು ಹಾಗೂ ವಾಲಿಬಾಲ್, ಥ್ರೋಬಾಲ್, ಕಬಡ್ಡಿ, ಖೋ-ಖೋ, ಲಗೋರಿ, ಕ್ರಿಕೆಟ್, ಈಜು, ಕೆಸರುಗದ್ದೆ ಓಟ, ಕೆಸರುಗದ್ದೆ ಹಗ್ಗ- ಜಗ್ಗಾಟ ಮತ್ತು ಕೆಸರು ಕಬಡ್ಡಿ ಸೇರಿದಂತೆ ವಿವಿಧ ಕ್ರೀಡೆಗಳು ನಡೆದವು. ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಗೆಲುವಿಗಾಗಿ ಸೆಣಸಾಟ ನಡೆಸಿದರು.
ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಖೋ-ಖೋ ಕ್ರೀಡಾಪಟು ಕೆ.ವರುಣ್‌ಕುಮಾರ್ ಸೇರಿ ಹಲವರು ಇದ್ದರು.