ಭಟ್ಕಳ: ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಲಾದ ಎರಡು ದಿನಗಳ ಅಂತರಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯನ್ನು (ಭಟ್ಕಳ ಮೇಡಿಯಾ ಕಪ್) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಅಧ್ಯಕ್ಷ ಜಿ.ಸುಬ್ರಾಯ ಭಟ್ಟ ಬಕ್ಕಳ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪತ್ರಕರ್ತರು ವೃತ್ತಿಯೊಂದಿಗೆ ಕ್ರೀಡೆ ಕಡೆಗೂ ಆಸಕ್ತಿ ವಹಿಸಿರುವುದು ಉತ್ತಮ ಬೆಳವಣಿಗೆ. ಭಟ್ಕಳದ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಅಂತರಜಿಲ್ಲಾ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಪತ್ರಕರ್ತರು ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದಾರೆ. ಇಂತಹ ಪಂದ್ಯಾವಳಿಯಿಂದ ಒತ್ತಡ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಪಂದ್ಯದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯವಾಗಿರುತ್ತದೆ. ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು,ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದೆ. ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಧ್ಯೇಯೋದ್ಧೇಶಗಳು ರಾಜ್ಯದಲ್ಲೇ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಸಂಘದಡಿಯಲ್ಲಿ ಉತ್ತಮ ಕಾರ್ಯಗಳು ನಡೆಯಲಿ. ಆ ಮೂಲಕ ಪತ್ರಕರ್ತರಿಗೆ ಅನುಕೂಲವಾಗಲಿ ಎಂದು ಹಾರೈಸಿದರು.ಮುಖ್ಯ ಅತಿಥಿಯಾಗಿದ್ದ ಜಾಲಿಪಟ್ಟಣ ಪಂಚಾಯತ್ ಅಧ್ಯಕ್ಷೆ ಅಪ್ಸಾ ಹುಜೈಪಾ ಅವರು ಪಂದ್ಯಾವಳಿಗೆ ಶುಭ ಕೋರಿದರು. ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ, ಭಟ್ಕಳ ಪತ್ರಕರ್ತರ ಕ್ಷೇಮಾಭಿವೃದ್ಧಿಗೋಸ್ಕರ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪಿಸಿಕೊಂಡು ಅದರಡಿ ಹಲವು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ. ಸಂಘದ ಯುವ ತಂಡ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಅಂತರಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯನ್ನು ಉತ್ತಮವಾಗಿ ಆಯೋಜಿಸಿದ್ದು, ಇದರ ಪ್ರಾಯೋಜಕತ್ವವನ್ನು ಅರ್ಬನ್ ಬ್ಯಾಂಕ್ ನಿರ್ದೇಶಕಿ ಬೀನಾ ಮಂಕಾಳ ವೈದ್ಯ ವಹಿಸಿಕೊಂಡಿದ್ದಾರೆ. ಭಟ್ಕಳದಲ್ಲಿ ಅಂತರಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿರುವುದು ಪತ್ರಕರ್ತರ ಮಧ್ಯೆ ಪ್ರೀತಿ, ವಿಶ್ವಾಸ, ಬಾಂಧವ್ಯ ಹೆಚ್ಚಿಸಿದೆ. ನಮ್ಮ ಸಂಘಕ್ಕೆ ಇದಯ ಹೆಮ್ಮೆಯ ಜತೆಗೆ ಗೌರವನ್ನು ಹೆಚ್ಚಿಸಿದೆ ಎಂದರು.
ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ರಾಧಾಕೃಷ್ಣ ಭಟ್ಟ, ಉಪಾಧ್ಯಕ್ಷ ವಿಷ್ಣು ದೇವಡಿಗ, ಜಾಲಿ ಪಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಈಶ್ವರ ಮೊಗೇರ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಾಘವೇಂದ್ರ ಭಟ್ಟ, ಹಿರಿಯ ಪತ್ರಕರ್ತ ಸತೀಶಕುಮಾರ ನಾಯ್ಕ, ಶೇಷಗಿರಿ ಮುಂಡಳ್ಳಿ, ಭಟ್ಕಳ ಸ್ಪೋರ್ಟ್ಸನ ವಸೀಮ್, ಗುರುಸುಧೀಂದ್ರ ಕಾಲೇಜಿನ ಉಪನ್ಯಾಸಕ ಕೃಷ್ಣ ಮೊಗೇರ ಮುಂತಾದವರಿದ್ದರು.ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ ಸ್ವಾಗತಿಸಿದರು. ಸಂಘದ ಸದಸ್ಯ ಭಾಸ್ಕರ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ನಾಗರಾಜ ಮೊಗೇರ ಸಂಜನಾ ನಿರೂಪಿಸಿದರು. ಸಂಘದ ಖಚಾಂಚಿ ಮೋಹನ ನಾಯ್ಕ ವಂದಿಸಿದರು. ಪಂದ್ಯಾವಳಿಯಲ್ಲಿ ಆರು ಪತ್ರಕರ್ತರ ತಂಡಗಳು ಪಾಲ್ಗೊಂಡಿದ್ದವು.