- ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನೆ ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಶಾರೀರಿಕವಾಗಿ ಗಟ್ಟಿಗೊಳಿಸುವ ಜೊತೆಗೆ ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬುವ ಸಾಧನ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಭೈರೇಗೌಡ ಹೇಳಿದರು. ನಗರದ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಸಂಘದ ಸಂಯುಕ್ರಾಶ್ರಯದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಪಾಲ್ಗೊಳ್ಳುವಿಕೆ ಅತ್ಯಂತ ಮುಖ್ಯವಾಗಿದ್ದು, ಸೂಕ್ತ ತರಬೇತಿ ಪಡೆದರೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಲು ಸಾಧ್ಯವಿದೆ. ಇದಕ್ಕಾಗಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ನಿರಂತರ ಶ್ರಮ ಅಗತ್ಯ ಎಂದು ಸಲಹೆ ನೀಡಿದರು. ಕ್ರೀಡಾಸಕ್ತಿಯಲ್ಲಿ ಅತ್ಯಂತ ಶ್ರಮವಹಿಸಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಹೊಣೆ ತೀರ್ಪುಗಾರರ ಮೇಲಿದ್ದು ಉತ್ತಮ ಕ್ರೀಡಾ ಚಟುವಟಿಕೆಯಲ್ಲಿ ತೊಡಗುವ ಮಕ್ಕಳನ್ನು ಆಯ್ಕೆಗೊಳಿಸಿ ರಾಜ್ಯಮಟ್ಟಕ್ಕೆ ಕಳುಹಿಸುವ ಮಹತ್ತರ ಜವಾಬ್ದಾರಿಯನ್ನು ತೀರ್ಪುಗಾರರು ನಿಭಾಯಿಸಬೇಕು ಎಂದು ಹೇಳಿದರು. ರಾಜ್ಯ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಫೈರೋಝ್ ಅಹಮ್ಮದ್ ಮಾತನಾಡಿ, ಕಳೆದ ಒಂದೂವರೆ ತಿಂಗಳಿನಿಂದ ದೈಹಿಕ ಶಿಕ್ಷಕರು ತರಬೇತಿ ನೀಡಿ ಅತ್ಯಂತ ಶ್ರಮವಹಿಸಿದ್ದಾರೆ. ಕಡಿಮೆ ಕಾಲಾವಧಿಯಲ್ಲಿ ದೊಡ್ಡಮಟ್ಟದಲ್ಲಿ ಕ್ರೀಡಾಚಟುವಟಿಕೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಜಿಲ್ಲಾಮಟ್ಟದ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಮುಂದಿನ ನ. 1 ರಿಂದ 3 ರವರೆಗೆ ಉಡುಪಿಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಭಾಗವಹಿಸಬಹುದಾಗಿದ್ದು ನ.1 ರಿಂದ ನೋಂದಣಿ ಕಾರ್ಯ ನಡೆಯಲಿದ್ದು ನ.2 ಮತ್ತು 3 ರಂದು ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ರಂಗನಾಥ, ಶಿಕ್ಷಣ, ಕ್ರೀಡೆ ಸೇರಿ ಇತರೆ ಚಟುವಟಿಕೆಗಳಲ್ಲಿ ರಾಷ್ಟ್ರಮಟ್ಟದವರೆಗೂ ಸಾಧನೆ ಮಾಡುವ ಮೂಲಕ ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತರಲು ವಿದ್ಯಾರ್ಥಿಗಳು ಮುಂದಾಗಬೇಕು. ಅದಕ್ಕಾಗಿ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ.ರವೀಶ್, ಶಿಕ್ಷಣಾಧಿಕಾರಿ ಎಸ್.ಆರ್.ಮಂಜುನಾಥ್, ಜಿಪಂ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಸುಂದರೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿಲ್ಲಾಧ್ಯಕ್ಷ ದೇವೇಂದ್ರ, ಪ್ರಾಥಮಿಕ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎನ್.ಟಿ.ಚಂದ್ರಯ್ಯ, ತಾಲೂಕು ಅಧ್ಯಕ್ಷ ಬಿ.ಆರ್.ಕಿರಣ್‌ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪಿ.ಕುಮಾರಸ್ವಾಮಿ, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಎಸ್.ಶಿವಪ್ಪ, ಕಾರ್ಯದರ್ಶಿ ಪಾಂಡುರಂಗ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪರಮೇಶ್ವರಪ್ಪ ಉಪಸ್ಥಿತರಿದ್ದರು. 26 ಕೆಸಿಕೆಎಂ 3 ಚಿಕ್ಕಮಗಳೂರಿನ ಜಿಲ್ಲಾ ಆಟದ ಮೈದಾನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಭೈರೇಗೌಡ ಉದ್ಘಾಟಿಸಿದರು.