ಶೃಂಗೇರಿ: ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಅಸಮಾಧಾನ

KannadaprabhaNewsNetwork |  
Published : Nov 26, 2026, 02:00 AM IST
ಅಯ್ಯನಾರ್ | Kannada Prabha

ಸಾರಾಂಶ

ಚಿಕ್ಕಮಗಳೂರುಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ವಿಚಾರದಲ್ಲಿ ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿ ಶೃಂಗೇರಿ, ಮೂಡಿಗೆರೆ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಕೈ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ, ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ.

ಶಾಸಕರ ರಾಜೀನಾಮೆ ಎಚ್ಚರಿಕೆ ಬೆನ್ನಲ್ಲೇ ಕೈ ಕಾರ್ಯಕರ್ತರ ರಾಜೀನಾಮೆ ಪರ್ವ! । ಕಾರ್ಯಕರ್ತರ ನಿರ್ಲಕ್ಷ್ಯ ಆರೋಪ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ವಿಚಾರದಲ್ಲಿ ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿ ಶೃಂಗೇರಿ, ಮೂಡಿಗೆರೆ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಕೈ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿರುವ ಬೆನ್ನಲ್ಲೇ, ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕ ಆಡಳಿತ ವೈಖರಿ ಹಾಗೂ ಕಾರ್ಯಕರ್ತರ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಕೊಪ್ಪ ತಾಲೂಕು ವ್ಯಾಪ್ತಿಯ 25ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮಗೆ ವಹಿಸಿರುವ ಜವಾಬ್ದಾರಿಗಳಿಗೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ.

ಶೃಂಗೇರಿ ಕ್ಷೇತ್ರದ ಕೊಪ್ಪ ತಾಲೂಕು ವ್ಯಾಪ್ತಿಯ ಜಲದುರ್ಗ ಬೂತ್ ಸಮಿತಿ ಅಧ್ಯಕ್ಷ ಅಯ್ಯನಾರ್ ಹಾಗೂ ಸಂದೀಪ್ ಜೆ.ವಿ. ನೇತೃತ್ವದಲ್ಲಿ ಕಾರ್ಯಕರ್ತರು ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ.

ಈಗಾಗಲೇ ಕೆಲವರು ತಾಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಹೋಬಳಿ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಇತರ ಕಾರ್ಯಕರ್ತರೂ ಇದೇ ಹಾದಿ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಜಯಪುರದ ಬೂತ್ ಸಮಿತಿ ಅಧ್ಯಕ್ಷ ಅಯ್ಯನಾರ್ ಹಾಗೂ ಜಲದುರ್ಗ ಗ್ರಾಮದ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ಸಂದೀಪ್ ಜೆ.ವಿ. ಅವರು ಹಲವು ವರ್ಷಗಳಿಂದ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ನಿರ್ವಹಿಸುತ್ತಿದ್ದ ಜವಾಬ್ದಾರಿಗಳು ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರದಲ್ಲಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಯ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಲ್ಲದೆ, ವಿಧಾನಸಭಾ ಚುನಾವಣೆಯಲ್ಲಿ ಶಾಸಕರ ಗೆಲುವಿಗಾಗಿ ಹಗಲು-ರಾತ್ರಿ ಶ್ರಮಿಸಿ ತಮ್ಮ ಬೂತ್‌ನಲ್ಲಿ 21 ಮತಗಳ ಮುನ್ನಡೆ ದೊರಕಿಸಿಕೊಟ್ಟಿದ್ದಾಗಿ ತಿಳಿಸಿದ್ದಾರೆ.

ಪಕ್ಷದ ಅಭ್ಯರ್ಥಿಗಳನ್ನು ಪಂಚಾಯಿತಿಯಿಂದ ಹಿಡಿದು ವಿವಿಧ ಚುನಾವಣೆಗಳಲ್ಲಿ ಗೆಲ್ಲಿಸಲು ಪ್ರಾಮಾಣಿಕವಾಗಿ ಶ್ರಮಿಸಿದ್ದರೂ, ವೈಯಕ್ತಿಕ ಹಾಗೂ ಸಾರ್ವಜನಿಕ ಕೆಲಸಗಳ ಕುರಿತು ಶಾಸಕರ ಬಳಿ ಮನವಿ ಮಾಡಿದಾಗ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಗೌರವ ಮತ್ತು ಮನ್ನಣೆ ಸಿಗುತ್ತಿಲ್ಲ. ಈ ನಿರ್ಲಕ್ಷ್ಯದಿಂದ ತೀವ್ರವಾಗಿ ಮನನೊಂದಿದ್ದು, ಪಕ್ಷದ ಜವಾಬ್ದಾರಿಗಳಿಂದ ಹೊರಬರುವ ನಿರ್ಧಾರ ಕೈಗೊಂಡಿರುವುದಾಗಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕರ ರಾಜೀನಾಮೆ ಎಚ್ಚರಿಕೆ ವಿಚಾರ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ, ಸ್ವಂತ ಕ್ಷೇತ್ರದಲ್ಲಿಯೇ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆಗೆ ಮುಂದಾಗಿರುವುದು ಶೃಂಗೇರಿ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಳಕಲ್ಲಿಗೆ ಬಂತು ಕನ್ನಡ ಬಂಡಾರದ ರಥ
ಅಧಿವೇಶನ ಸಿದ್ಧತೆ ಹೆಸರಿನಲ್ಲಿ ಹಣ ದುರ್ಬಳಕೆ?