ಕನ್ನಡಪ್ರಭ ವಾರ್ತೆ ಬೆಂಗಳೂರು
ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಹಲವು ಕಡೆ ಭಜನೆ, ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಪ್ರಾಣಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಲು ನಗರದ ಹಲವೆಡೆ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ನೇರ ಪ್ರಸಾರ ವೀಕ್ಷಣೆಗೆ ಭಾರೀ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ನಗರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳು, ಪ್ರಮುಖ ವೃತ್ತಗಳು, ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಪ್ರಮುಖ ಸ್ಥಳಗಳಿಗೆ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.ಭಾನುವಾರ ಸಂಜೆಯಿಂದಲೇ ಹೊಯ್ಸಳ ಗಸ್ತು ವಾಹನಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಗಸ್ತು ಮಾಡುತ್ತಾ ನಿಗಾವಹಿಸಿದ್ದಾರೆ. ಪ್ರಮುಖ ಸ್ಥಳಗಳಿಗೆ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಪ್ರದೇಶಗಳ ಠಾಣೆಗಳಿಗೆ
ದಯಾನಂದ್ ಭೇಟಿ, ಪರಿಶೀಲನೆಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಭಾನುವಾರ ರಾಜಧಾನಿಯ ಸೂಕ್ಷ್ಮ ಪ್ರದೇಶಗಳ ಪೊಲೀಸ್ ಠಾಣೆಗಳಿಗೆ ದೀಢೀರ್ ಭೇಟಿ ನೀಡಿ ಪರಿಶೀಲಿಸಿದರು.ನಗರದ ಕಮರ್ಷಿಯಲ್ ಸ್ಟ್ರೀಟ್, ಭಾರತಿನಗರ, ಶಿವಾಜಿನಗರ, ಹೆಚ್ಎಸ್ಆರ್ ಲೇಔಟ್, ಬಂಡೇಪಾಳ್ಯ ಠಾಣೆ, ಬೇಗೂರು, ಬೊಮ್ಮನಹಳ್ಳಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಠಾಣಾ ರಿಜಿಸ್ಟರ್ ಪುಸ್ತಕ ಪರಿಶೀಲಿಸಿದರು. ಸಂಬಂಧಪಟ್ಟ ಠಾಣಾಧಿಕಾರಿಗಳಿಂದ ತಮ್ಮ ವ್ಯಾಪ್ತಿಯಲ್ಲಿ ಕೈಗೊಂಡಿರುವ ಬಂದೋಬಸ್ತ್ ಬಗ್ಗೆ ಮಾಹಿತಿ ಪಡೆದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕೆ ವಹಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಬೇಕು. ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಮತ್ತು ಬೆಳಗ್ಗೆ ಗಸ್ತು ಹೆಚ್ಚಿಸುವಂತೆ ಸೂಚಿಸಿದರು.