ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ ಆವರಣದ ಶ್ರೀರಂಗ ವೇದಿಕೆಯಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಶ್ರೀರಂಗಪಟ್ಟಣ ದಸರಾ ಹಬ್ಬದ ರೀತಿಯಲ್ಲಿ ನಡೆದು ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗೌರವಿಸುವಂತಹ ಕೆಲಸವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀರಂಗಪಟ್ಟಣ ದಸರಾ ಬಹಳ ಅದ್ಧೂರಿಯಾಗಿ ಜರುಗಿದೆ. ಈ ವೇದಿಕೆಯ ಮುಖಾಂತರ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಮಾಡಿಕೊಡಲಾಗಿದೆ. ಕಲಾವಿದರು ಪ್ರದರ್ಶನ ನೀಡುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಲಿ. ಅದೇ ರೀತಿ ಉತ್ಸವದ ಮೂಲಕ ಶ್ರೀರಂಗಪಟ್ಟಣದ ಹೆಸರು ಉನ್ನತ ಮಟ್ಟಕ್ಕೇರಲಿದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಸಾಂಸ್ಕೃತಿಕ ನೆಲಗಟ್ಟಿನಲ್ಲಿ ಪಾರಂಪರಿಕ ದಸರಾ ಬಹಳ ಅರ್ಥಪೂರ್ಣವಾಗಿ ನಡೆದಿದೆ. ಕಾರ್ಯಕ್ರಮದ ಯಶಸ್ವಿಗಾಗಿ ಸಹಕರಿಸಿದಂತಹ ಪ್ರತಿಯೊಬ್ಬರಿಗೂ ಅಭಿನಂದನೆ ಅರ್ಪಿಸುತ್ತೇನೆ ಎಂದರು.
ಕಳೆದ ಬಾರಿ ಹವಾಮಾನ ವೈಪರಿತ್ಯದಿಂದಾಗಿ ಮಳೆಯಾಗದೇ ಸರ್ಕಾರದ ವಿರುದ್ಧ ಹಲವು ಟೀಕೆ ಟಿಪ್ಪಣಿಗಳು ಕೇಳಿ ಬಂದಿದ್ದವು. ಈ ಬಾರಿ ಕೆಆರ್‌ಎಸ್ ಅಣೆಕಟ್ಟೆ ತುಂಬಿ ಸಿಎಂ, ಡಿಸಿಎಂ ಬಾಗಿನವನ್ನು ಅರ್ಪಿಸಿದ್ದಾರೆ. ಕಳೆದ 10 ದಿನಗಳಿಂದ ಜಿಲ್ಲೆಯಲ್ಲಿ ವರುಣನ ಆಶೀರ್ವಾದದಿಂದ ಸಾಕಷ್ಟು ಮಳೆಯಾಗುತ್ತಿದೆ ಎಂದರು.
ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಆದರೆ, ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಎಲ್ಲವನ್ನೂ ಮೆಟ್ಟಿ ನಿಲ್ಲಲಿದೆ. ಮಾಧ್ಯಮಗಳ ಮುಂದೆ ಮಾಡುವ ಟೀಕೆ ಟಿಪ್ಪಣಿಗಳು ಯಾವುದೇ ಚರ್ಚೆ ಆಗುವುದಿಲ್ಲ. ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಸಹ ಸರ್ಕಾರ ಗ್ಯಾರಂಟಿ, ಅಭಿವೃದ್ಧಿ ಸೇರಿದಂತೆ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ನಡೆಸುತ್ತಿದೆ ಎಂದರು.