ಮೇ 18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ-2, ಪಾರದರ್ಶಕವಾಗಿ ನಡೆಸಲು ಸೂಚನೆ

KannadaprabhaNewsNetwork |  
Published : May 15, 2026, 02:00 AM IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಮಾತನಾಡಿದರು. | Kannada Prabha

ಸಾರಾಂಶ

ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್., ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾವೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ ಮೇ 25ರ ವರೆಗೆ ಜಿಲ್ಲೆಯ ಏಳು ಕೇಂದ್ರಗಳಲ್ಲಿ ನಡೆಯಲಿದ್ದು, ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಬೇಕು. ವ್ಯವಸ್ಥಿತ ಹಾಗೂ ಸುಗಮವಾಗಿ ಪರೀಕ್ಷೆ ನಡೆಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್., ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ತ್ರಿ ಸದಸ್ಯ ಕಮಿಟಿ: ಪ್ರಶ್ನೆಪತ್ರಿಕೆ ಬಂಡಲ್ ತೆಗೆದುಕೊಂಡು ಹೋಗಲು ಪ್ರತಿ ತಾಲೂಕಿಗೂ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ. ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರಶ್ನೆಪತ್ರಿಕೆಗಳನ್ನು ಆಯಾ ತಾಲೂಕಿಗೆ ನಿಗದಿಪಡಿಸಿದ ಸಮಯಕ್ಕೆ ಅನುಗುಣವಾಗಿ ತೆಗೆದುಕೊಂಡು ಹೋಗಬೇಕು ಎಂದು ಸೂಚನೆ ನೀಡಿದರು.

ಸ್ವಚ್ಛತೆಗೆ ಆದ್ಯತೆ: ಪರೀಕ್ಷಾ ಕೊಠಡಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ವ್ಯವಸ್ಥಿತವಾಗಿ ಪೀಠೋಪಕರಣ, ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಹೊಂದಿರಬೇಕು ಎಂದರು.

ಪರೀಕ್ಷಾ ಕೇಂದ್ರಗಳಿಗೆ ಬಂದೋಬಸ್ತ್: ಪರೀಕ್ಷೆ ನಡೆಯುವ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ಒದಗಿಸಲು ಹಾಗೂ ಆರೋಗ್ಯ ಶುಶ್ರೂಷಕಿಯರನ್ನು ನಿಯೋಜನೆ ಮಾಡಬೇಕು ಎಂದು ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಸಿ ಕ್ಯಾಮೆರಾ ಕಡ್ಡಾಯ: ಪ್ರಶ್ನೆಪತ್ರಿಕೆ ಬಂಡಲ್ ತೆರೆಯುವಾಗ ಮತ್ತು ಉತ್ತರ ಪತ್ರಿಕೆ ಬಂಡಲ್‌ಗಳನ್ನು ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಸೀಲ್ ಮಾಡಬೇಕು, ವೆಬ್ ಕಾಸ್ಟಿಂಗ್ ಇರುತ್ತದೆ. ಪರೀಕ್ಷೆ ಮುಗಿದ ಆನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಸೂಕ್ತ ಪೊಲೀಸ್ ಬಂದೋಬಸ್ತ್‌ನಲ್ಲಿ ಸಲ್ಲಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸಬೇಕು. ಸಿಸಿ ಕ್ಯಾಮೆರಾ ವೆಬ್ ಕಾಸ್ಟಿಂಗ್ ಕೊಠಡಿಯಲ್ಲಿ ಸರಿಯಾಗಿ ನಿರ್ವಹಣೆ ಮಾಡಬೇಕು. ಎಲ್ಲ ಸ್ಕ್ರೀನ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರಬೇಕು ಎಂದು ಸೂಚಿಸಿದರು.

200 ಮೀಟರ್ ಪ್ರದೇಶ ನಿಷೇಧ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ತಿಳಿಸಿದರು.

ಅಧಿಕಾರಿ-ಸಿಬ್ಬಂದಿಗಳ ನೇಮಕ: ಸುಗಮ ಪರೀಕ್ಷೆ ನಡೆಸಲು ಮುಖ್ಯಅಧೀಕ್ಷಕರು -7, ಕಸ್ಟೋಡಿಯನ್-7, ಸ್ಥಾನಿಕ ಜಾಗ್ರತದಳ-7, ಮಾರ್ಗಾಧಿಕಾರಿಗಳು-7, ಕೊಠಡಿ ಮೇಲ್ವಿಚಾರಕರು-93 ಹಾಗೂ 7 ಕಚೇರಿ ಸಹಾಯಕರನ್ನು ನೇಮಕ ಮಾಡಲಾಗಿದೆ.

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಶೋಕ ಶಾಸ್ತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ಎಸ್.ಎಸ್. ಅಡಿಗ, ಆರ್.ವಿ. ಚಿನ್ನಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ತಾಲೂಕು ತಹಸೀಲ್ದಾರಗಳು ಭಾಗವಹಿಸಿದ್ದರು.

ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ: ಪರೀಕ್ಷಾರ್ಥಿಗಳು ಅಥವಾ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಇಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್ ಹಾಗೂ ರಿಸ್ಟ್ ವಾಚ್‌ಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಸೂಚಿಸಿದರು.2,160 ವಿದ್ಯಾರ್ಥಿಗಳು ನೋಂದಣಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ಗೆ 667 ಹೊಸ ವಿದ್ಯಾರ್ಥಿಗಳು, 1101 ಪುನರಾವರ್ತಿತ ವಿದ್ಯಾರ್ಥಿಗಳು, 341 ಖಾಸಗಿ ಹೊಸ ಅಭ್ಯರ್ಥಿಗಳು, 51 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿ 2,160 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1,681 ಗಂಡು ಮತ್ತು 479 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರದಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರ (ರಟ್ಟಿಹಳ್ಳಿ ತಾಲೂಕು ಹೊರತುಪಡಿಸಿ) ಒಟ್ಟು ಏಳು ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ್ ದಂಡಿನ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾನತೆಯ ಹೆಸರಿನಲ್ಲಿ ಮಹಿಳೆಯರ ಶೋಷಣೆ
ಸಿಐಟಿಯು ಕಾರ್ಯಕರ್ತರಿಂದ ಪ್ರತಿಭಟನೆ