ಕನ್ನಡಪ್ರಭ ವಾರ್ತೆ, ಬೆಂಗಳೂರು
ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಸೋಮವಾರದಿಂದ (ಮಾ.25) ರಾಜ್ಯಾದ್ಯಂತ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 2,750 ಕೇಂದ್ರಗಳಲ್ಲಿ ಏ.6ರವರೆಗೆ ಪರೀಕ್ಷೆಗಳು ನಡೆಯಲಿವೆ.
ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ಪೈಕಿ 4,41, 910 ಬಾಲಕರು, 4,28,058 ಬಾಲಕಿಯರಾಗಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯುಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 5,4254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ.
ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕ್ಯಾಮೆರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ವಹಿಸಲಾಗುವುದು ಎಂದು ಮಂಡಳಿ ಅಧ್ಯಕ್ಷೆ ಮಂಜುಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರ್ದೇಶಕರು ಮತ್ತು ಸಹ ನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ, ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರನ್ನಾಗಿ, ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಣ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಜಿಲ್ಲಾಧಿಕಾರಿಗಳ ಹಂತದಲ್ಲಿ ವಿಚಕ್ಷಣ ಜಾಗೃತದಳ ನೇಮಿಸಲು ತಿಳಿಸಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.