ಕಾಲ್ತುಳಿತ: ತುರ್ತು ಅಧಿವೇಶನ ಕರೆಯಲು ಸಿಎಂಗೆ ಅಶೋಕ್‌ ಪತ್ರ

KannadaprabhaNewsNetwork |  
Published : Jun 16, 2025, 03:47 AM ISTUpdated : Jun 16, 2025, 06:19 AM IST
Karnataka LoP R Ashoka

ಸಾರಾಂಶ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ಕಾರಣವಾದ ಲೋಪ, ಘಟನೆ ಬಳಿಕ ಸರ್ಕಾರದ ಕ್ರಮಗಳಿಂದ ಉಂಟಾಗಿರುವ ಸಂಶಯ ನಿವಾರಣೆ. ಮುಂದೆ ಈ ರೀತಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯುವಂತೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌   ಆಗ್ರಹಿಸಿದ್ದಾರೆ.

 ಬೆಂಗಳೂರು :  ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ದುರಂತಕ್ಕೆ ಕಾರಣವಾದ ಲೋಪ, ಘಟನೆ ಬಳಿಕ ಸರ್ಕಾರದ ಕ್ರಮಗಳಿಂದ ಉಂಟಾಗಿರುವ ಸಂಶಯ ನಿವಾರಣೆ. ಮುಂದೆ ಈ ರೀತಿ ಆಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಮೂರು ದಿನಗಳ ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ದುರ್ಘಟನೆಗೆ ಸಂಬಂಧಿಸಿ ಆಡಳಿತದಲ್ಲಿ ಆಗಿರುವ ಲೋಪ, ಘಟನೆ ಬಳಿಕ ಸರ್ಕಾರದ ಕ್ರಮ ಅನೇಕ ಸಂಶಯ ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು ಮೂರು ರೀತಿಯ ತನಿಖೆ ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.

ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ. ಕಾಲ್ತುಳಿತ ಘಟನೆಗೆ ಕಾರಣವಾದ ಸಂದರ್ಭಗಳ ಸಂಪೂರ್ಣ ತನಿಖೆ, ಜನಜಂಗುಳಿ ನಿಯಂತ್ರಣ ಮತ್ತು ಸುರಕ್ಷತಾ ಕ್ರಮಗಳ ಬಲವರ್ಧನೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರದ ವ್ಯವಸ್ಥೆ, ಭವಿಷ್ಯದಲ್ಲಿ ಇಂಥ ಘಟನೆ ತಪ್ಪಿಸಲು ರಾಜ್ಯ ಸರ್ಕಾರ ಕೈಗೊಳ್ಳುವ ಯೋಜನೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲು ತುರ್ತು ಅಧಿವೇಶನ ಕರೆಯಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಈ ತುರ್ತು ಅಧಿವೇಶನ ರಾಜ್ಯ ಸರ್ಕಾರದ ಬದ್ಧತೆ ಮತ್ತು ದುರಂತದಿಂದ ಕಲಿತ ಪಾಠಗಳ ಆಧಾರದಲ್ಲಿ ಭವಿಷ್ಯದಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಹಾಯಕವಾಗಲಿದೆ. ಹಾಗೆಯೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

PREV
Read more Articles on

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ