ಕಾಲ್ತುಳಿತ: ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ; ಬಿಜೆಪಿ ಆರೋಪ

KannadaprabhaNewsNetwork |  
Published : Jun 17, 2025, 01:21 AM IST
16ಕೆಎಂಎನ್ ಡಿ29 | Kannada Prabha

ಸಾರಾಂಶ

ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ.

ಕನ್ನಡಪ್ರಭ ವಾರ್ತೆ ಮಂಡ್ಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ವೇಳೆದ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತರಾಗಲು ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು.

ರಾಜ್ಯ ಬಿಜೆಪಿ ಘಟಕ ಕಾಲ್ತುಳಿತ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಯಾವುದೇ ಪೂರ್ವ ತಯಾರಿ ಇಲ್ಲದೇ ಕಾರ್ಯಕ್ರಮ ಆಯೋಜನೆ ಮಾಡಿರುವುದೇ ಕಾಲ್ತುಳಿತಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಾಯಕರ ಪ್ರಚಾರದ ಹುಚ್ಚಿಗಾಗಿ ಈ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ವಿಜಯೋತ್ಸವ ಆಚರಿಸಲು ಪೊಲೀಸ್ ಇಲಾಖೆ ಒಪ್ಪಿಗೆ ನೀಡಿಲ್ಲ. ವಿಧಾನಸೌಧದ ಮುಂದೆ ಸಹ ಕಾರ್ಯಕ್ರಮಕ್ಕೆ ಪೊಲೀಸರು ಒಪ್ಪಿಗೆ ನೀಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ ಮಾಡಿ ಅನುಮತಿ ಕೊಡಿಸಿದ್ದಾರೆ. ಇದಕ್ಕೆ ಸರ್ಕಾರ ಹೊಣೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಮಾಯಕರ ಸಾವಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 7 ಜನ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ 4 ಜನ ಸಾವನ್ನಪ್ಪಿದ್ದಾರೆ ಎಂದು ಕಿಡಿಕಾರಿದರು.

ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಎಲ್ಲಿಯೂ ದೊಡ್ಡ ಕಾರ್ಯಕ್ರಮ ಆಯೋಜನೆ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಆದರೆ, ಸರ್ಕಾರದ ನಾಯಕರು ಪ್ರಚಾರದ ಹುಚ್ಚಿಗಾಗಿ ವಿಧಾನಸೌಧ ಮೆಟ್ಟಿಲ ಮೇಲೆ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಇದರ ಬಗ್ಗೆ ಯಾವುದೇ ಗಂಭೀರವಾದ ಕ್ರಮ ಕೈಗೊಂಡಿಲ್ಲ. ಅಲ್ಲಿ ಜನರು ನೂಕು ನುಗ್ಗಲಿನಲ್ಲಿ ಸಿಲುಕಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಚಪ್ಪಲಿ, ಕಲ್ಲುಗಳನ್ನು ತೂರಿದ್ದಾರೆ ಎಂದು ದೂರಿದರು.

ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ. ಇಲ್ಲಿ ರಾಜಕೀಯ ನಾಯಕರು, ವಿಧಾನಸೌಧ ಸಿಬ್ಬಂದಿ ಅವರ ಮಕ್ಕಳು, ಮೊಮ್ಮಕ್ಕಳು ಬಂದು ಸೆಲ್ಫಿ ತೆಗೆದುಕೊಂಡು ಮೋಜು ಮಾಡುತ್ತಿದ್ದರು ಎಂದು ದೂರಿದರು.

ಈ ಎಲ್ಲ ದುರಂತಗಳಿಗೆ ಸರ್ಕಾರವೇ ನೇರ ಹೊಣೆಯಾಗಿದ್ದು, ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗುಪ್ತಚರ ಇಲಾಖೆಯ ಮುಖ್ಯಸ್ಥರು ಕೂಡ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂತಹ ಅವಘಡವನ್ನು ತಡೆಯುವಲ್ಲಿ ವಿಫಲವಾಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ವಸಂತ ಕುಮಾರ್, ಶಿವಲಿಂಗಪ್ಪ, ಎಂ.ಎಸ್.ನಂದೀಶ್, ಪ್ರಸನ್ನ ಕುಮಾರ್, ಸಿದ್ದರಾಜುಗೌಡ, ಸಿ.ಟಿ.ಮಂಜುನಾಥ್, ಜಿ.ವೈ.ಚಂದ್ರು ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''