ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಜೋಳ ಮತ್ತು ರಾಗಿ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ಆಯ್ದ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಬೆಂಬಲ ಬೆಲೆ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಹಾಗೂ ಮಾರ್ಗಸೂಚಿ ಅನ್ವಯ ಎಫ್.ಎ.ಕ್ಯೂ. ಗುಣಮಟ್ಟ ಹೊಂದಿದ ಜೋಳ ಹಾಗೂ ರಾಗಿ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.ಬೆಂಬಲ ಬೆಲೆ: ಸರ್ಕಾರ ನಿಗದಿಪಡಿಸಿದಂತೆ ಬಿಳಿಜೋಳ-ಹೈಬ್ರೀಡ್ ಪ್ರತಿ ಕ್ವಿಂಟಲ್‌ಗೆ ₹೩,೧೮೦ ಹಾಗೂ ಬಿಳಿಜೋಳ ಮಾಲ್ದಂಡಿ ₹೩,೨೨೫ ಹಾಗೂ ರಾಗಿ ₹೩,೮೪೬ರಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಡಿ. ೧ರಿಂದ ರೈತರ ನೋಂದಣಿ ಆರಂಭಿಸಬೇಕು. ಡಿ. ೧ರಿಂದ ಮಾ. ೩೧ರ ವರೆಗೆ ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಂಡಳಿ ನಿಯಮಿತ ಸಂಸ್ಥೆಯ ಮೂಲಕ ರಾಗಿ ಮತ್ತು ಜೋಳ ಖರೀದಿಗೆ ಕ್ರಮವಹಿಸುವಂತೆ ಸೂಚನೆ ನೀಡಿದರು.
ಖರೀದಿ ಕೇಂದ್ರ: ಜೋಳ ಖರೀದಿ ಕೇಂದ್ರಗಳನ್ನು ಶಿಗ್ಗಾಂವಿ, ರಾಣಿಬೆನ್ನೂರು ಮತ್ತು ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಾಗೂ ರಾಗಿ ಖರೀದಿ ಕೇಂದ್ರಗಳನ್ನು ಬ್ಯಾಡಗಿ ಮತ್ತು ಹಿರೇಕೆರೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲು ಸೂಚನೆ ನೀಡಿದರು.ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಕಬ್ಬೇರಹಳ್ಳಿ ಅವರು ಬೆಂಬಲ ಬೆಲೆಯಡಿ ಜೋಳ ಮತ್ತು ರಾಗಿಯನ್ನು ಪ್ರತಿ ಎಕರೆಗೆ ೧೦ ಕ್ವಿಂಟಲ್‌ನಂತೆ ಖರೀದಿಗೆ ಅವಕಾಶವಿದೆ. ರೈತರಿಂದ ಖರೀದಿಸಿದ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಜೋಳ ೧೨೩ ಹೆಕ್ಟೇರ್ ಪ್ರದೇಶದಲ್ಲಿ ಹಾಗೂ ರಾಗಿ ೧೯ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಮೇಶ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ, ಸಹಕಾರಿ ಸಂಘಗಳ ಉಪನಿಬಂಧಕರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರು, ರಾಜ್ಯ ಉಗ್ರಾಣ ನಿಗಮದ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.