ಸಣ್ಣ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರ ಜಿಎಸ್ಟಿ ಮನ್ನಾ ಭಾಗ್ಯ

KannadaprabhaNewsNetwork |  
Published : Jul 24, 2025, 01:45 AM ISTUpdated : Jul 24, 2025, 06:11 AM IST
GST Meeting 2 | Kannada Prabha

ಸಾರಾಂಶ

ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ಜಿಎಸ್‌ಟಿ ನೋಟಿಸ್‌ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಂಬಂಧಪಟ್ಟ ಸಣ್ಣ ವರ್ತಕರ ಹಳೆಯ ತೆರಿಗೆ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.  

  ಬೆಂಗಳೂರು :  ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ಜಿಎಸ್‌ಟಿ ನೋಟಿಸ್‌ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಂಬಂಧಪಟ್ಟ ಸಣ್ಣ ವರ್ತಕರ ಹಳೆಯ ತೆರಿಗೆ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತನ್ಮೂಲಕ ಸಣ್ಣ ಮತ್ತು ಅತಿ ಸಣ್ಣ ಅಂಗಡಿಗಳಿಗೆ ‘ತೆರಿಗೆ ಬಾಕಿ ಮನ್ನಾ ಭಾಗ್ಯ’ ನೀಡಿದ್ದಾರೆ.

ಅಲ್ಲದೆ ರಾಜ್ಯದಲ್ಲಿ ಹಾಲು, ತರಕಾರಿ, ಮಾಂಸ, ಹಣ್ಣಿನಂಥ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯ್ತಿಯಿದೆ. ಅಂತಹ ವ್ಯಾಪಾರಿಗಳಿಗೆ ನೋಟಿಸ್‌ ನೀಡಿದ್ದರೂ ಅದು ನಿಯಮಬಾಹಿರ. ಇನ್ನು ತೆರಿಗೆ ವ್ಯಾಪ್ತಿಗೆ ಬರುವ ಸಣ್ಣ ಅಂಗಡಿಗಳು 40 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸಿದ್ದರೆ ಮಾತ್ರ ನೋಟಿಸ್‌ ನೀಡಲಾಗಿದೆ. ಆ ನೋಟಿಸ್‌ನಲ್ಲಿ ತಿಳಿಸಿರುವ ತೆರಿಗೆ ಬಾಕಿಯನ್ನು ಸಹ ಒಂದು ಬಾರಿಗೆ ಮನ್ನಾ ಮಾಡಲಾಗುವುದು. ಈ ನೋಟಿಸ್ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿಯವರು ಅಭಯ ನೀಡಿದ್ದಾರೆ.

ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಧಿಕಾರಿಗಳು ಹಾಗೂ ವರ್ತಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಿಸಿ:

ರಾಜ್ಯದಲ್ಲಿ ಈಗಾಗಲೇ ಜಿಎಸ್‌ಟಿ ನೋಟೀಸ್ ಕೊಟ್ಟಿರುವವರ ಮೇಲೆ ಏನೂ ಕ್ರಮವಿಲ್ಲ. ಅಂದರೆ ತೆರಿಗೆ ವಸೂಲಿ ಇಲ್ಲ. ತುಂಬಾ ಜನ ತಮ್ಮ ಅಂಗಡಿಗಲ್ಲಿದ್ದ ಸ್ಕಾನರ್‌ ಗಳನ್ನು ತೆಗೆದು ಹಾಕುತ್ತಿರುವ ವಿಚಾರ ತಿಳಿದುಬಂದಿದ್ದು, ಇದರ ಬಗ್ಗೆಯೂ ಕೂಡಾ ಚರ್ಚೆ ಆಗಿದೆ. ಈ ರೀತಿ ಮಾಡಬೇಡಿ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ಯುಪಿಐ ಅಡಿ 40 ಲಕ್ಷ ರು.ಗೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್ಟಿ ನೋಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. 20 ಲಕ್ಷ ರು.ಗಿಂತ ಹೆಚ್ಚು ವಹಿವಾಟು ನಡೆಸುವ ವ್ಯಾಪಾರಿಗಳು ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಕೋರಿದರು.

ಜಿಎಸ್‌ಟಿ ಬಗ್ಗೆ ಅರಿವು ಮೂಡಿಸಲು ಕ್ರಮ:

ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.

ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿದೆ. ಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಾವು ಸಣ್ಣ ವ್ಯಾಪಾರಿಗಳ ಪರ:

ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ. ಜಿಎಸ್ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಕಾನೂನಿನ ಪ್ರಕಾರ ಸರ್ಕಾರದೊಂದಿಗೆ ಸಹಕರಿಸಲು ಕೋರಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಸಚಿವ ಕೃಷ್ಣಬೈರೇಗೌಡ ಸೇರಿದಂತೆ ಹಲವರು ಹಾಜರಿದ್ದರು. 

ಪ್ರತಿಭಟನೆ ಹಿಂಪಡೆಯುವ ಭರವಸೆ: ಸಿಎಂ

ಸಭೆಯಲ್ಲಿ ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ವರ್ತಕರ ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನು ಈ ಬಗ್ಗೆ ಹಮ್ಮಿಕೊಳ್ಳಲು ನಿರ್ಧರಿಸಿದ್ದ ಎಲ್ಲಾ ಪ್ರತಿಭಟನೆಗಳನ್ನೂ ಹಿಂಪಡೆಯುವುದಾಗಿ ಸಂಘಸಂಸ್ಥೆಗಳ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ. ಹೀಗಾಗಿ ಯಾವುದೇ ಪ್ರತಿಭಟನೆಗಳು ಇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವ್ಯಾಪಾರಿಗಳಿಗೆ ತೊಂದರೆ ನೀಡಲ್ಲ

ಜಿಎಸ್ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುದು ಸರ್ಕಾರದ ಉದ್ದೇಶವಲ್ಲ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ತೆರೆಯಲಾಗಿದೆ. ವರ್ತಕರು ಇದರ ಸದುಪಯೋಗ ಪಡೆಯಿರಿ.

- ಸಿದ್ದರಾಮಯ್ಯ, ಮುಖ್ಯಮಂತ್ರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!