
ಗದಗ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ₹4500 ಕೋಟಿ ಹಣವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ರಾಜ್ಯದಲ್ಲಿ 2.38 ಲಕ್ಷಕ್ಕೂ ಅಧಿಕ ಮಕ್ಕಳು ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಅನೇಕ ವಸತಿ ಶಾಲೆಗಳು ಆರಂಭವಾಗಿದ್ದು, ಇದೀಗ 100 ವಸತಿ ಶಾಲೆಗಳನ್ನು ಸ್ಥಾಪಿಸಲಾಗುತ್ತಿದೆ. 100 ಮದರಸಾಗಳಲ್ಲಿ 9ರಿಂದ 10ನೇ ತರಗತಿ ಓದುತ್ತಿರುವ ಸುಮಾರು 5 ಸಾವಿರ ಮಕ್ಕಳು ಉತ್ತೀರ್ಣರಾಗುತ್ತಿದ್ದಾರೆ. ಮದರಸಾಗಳಲ್ಲಿಯೂ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಬೇಕು ಎಂಬ ಕಳಕಳಿಯಿಂದ ಸರ್ಕಾರ ಕೆಲಸ ಮಾಡುತ್ತಿದೆ ಎಂದರು.
ಕಡಿಮೆ ಅನುದಾನದಲ್ಲೇ ಗುಣಮಟ್ಟದ ಹಾಗೂ ವಿಶಾಲ ಕಟ್ಟಡ ನಿರ್ಮಾಣವಾಗಿರುವುದು ಸಂತೋಷದ ವಿಷಯ. ಈ ಕಾರ್ಯಕ್ಕೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ವಿಶೇಷವಾಗಿ ಸಚಿವ ಎಚ್.ಕೆ. ಪಾಟೀಲ ಅವರ ಸಹಕಾರವನ್ನು ಸ್ಮರಿಸಿದರು.ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು, ಶಾಲಾ ನೂತನ ಕಟ್ಟಡ ನಿರ್ಮಾಣಕ್ಕೆ ₹235 ಲಕ್ಷ ಹಾಗೂ ಹೆಚ್ಚುವರಿ ತರಗತಿಗಳ ಕಟ್ಟಡ ನಿರ್ಮಾಣಕ್ಕೆ ₹143 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.