ರಾಜ್ಯ ಸರ್ಕಾರ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಿದೆ: ಭೀಮಣ್ಣ ನಾಯ್ಕ

KannadaprabhaNewsNetwork |  
Published : Aug 29, 2026, 01:30 AM IST
ಸುದ್ದಿಗೋಷ್ಠಿಯಲ್ಲಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಲಿದೆ.

ಕನ್ನಡಪ್ರಭ ವಾರ್ತೆ ಸಿದ್ದಾಪುರ

ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಉತ್ತರ ಕನ್ನಡ ಜಿಲ್ಲೆಯ ಜನಜೀವನದ ಮೇಲೆ ತುಂಬಾ ಪರಿಣಾಮ ಬೀರಲಿದೆ. ಇಲ್ಲಿಯ ಕೃಷಿ, ತೋಟಗಾರಿಕೆ ಸೇರಿ ರೈತಾಪಿ ವರ್ಗದ ಕೃಷಿ ಚಟುವಟಿಕೆ ಸಂಪೂರ್ಣ ಕುಂಠಿತಗೊಳ್ಳಲಿದೆ. ಜನಜೀವನಕ್ಕೆ ಮಾರಕವಾಗಿರುವ ಈ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣ ತಿರಸ್ಕರಿಸುವುದಾಗಿ ರಾಜ್ಯದ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರು ಈಗಾಗಲೇ ನಮ್ಮ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ನಾನು ಹಿಂದಿನ ಅಧಿವೇಶನದಲ್ಲೆ ವಿರೋಧಿಸಿದಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಜಾರಿಗೊಳಿಸಲ್ಲ ಎಂದು ತಿಳಿಸಿದ್ದರು. ಇದೀಗ ಜಿಲ್ಲೆಯ ಎಲ್ಲಾ ಶಾಸಕರು, ಸಾಗರ ಶಾಸಕರು ಹಾಗೂ ಈ ವರದಿ ಪರಿಣಾಮ ಬೀರಲಿರುವ ಎಲ್ಲಾ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜತೆ ಚರ್ಚಿಸಿ ಸಾಧಕ-ಬಾಧಕಗಳನ್ನು ಮನವರಿಕೆ ಮಾಡಿದ್ದು, ಇದನ್ನು ಸಂಪೂರ್ಣ ತಿರಸ್ಕರಿಸುವುದಾಗಿ ತಿಳಿಸಿದಲ್ಲದೇ ಈಗಾಗಲೇ ಅಧಿಕಾರಿಗಳಿಗೂ ಸಹ ಸೂಚನೆ ನೀಡಿದ್ದಾರೆ ಎಂದರು.

ಕೇಂದ್ರ ಸರ್ಕಾರ ಜಿಲ್ಲೆಯ ವಾಸ್ತವ ಸ್ಥಿತಿಗತಿ ಅಧ್ಯಯನ ಮಾಡಿ ಸ್ಥಳೀಯರ ಅಭಿಪ್ರಾಯ ಪಡೆಯದೇ ವರದಿ ಜಾರಿಗೆ ಮುಂದಾಗುತ್ತಿರುವುದು ಸರಿಯಲ್ಲ ಎಂದರು.

ಶಿರಸಿ-ಸಿದ್ದಾಪುರ ಕ್ಷೇತ್ರದ ಎಲ್ಲೆಲ್ಲಿ ಮಳೆಯ ಅಭಾವವಾಗಿದೆ. ಅತಿವೃಷ್ಟಿಯಿಂದ ಹಾನಿಯಾಗಿದೆ ಎಂಬುದರ ಸಂಪೂರ್ಣ ವರದಿ ಪಡೆದು ಸರ್ಕಾರದ ಗಮನಕ್ಕೆ ತರುತ್ತೇನೆ. ಲಕ್ಷ್ಮಣ ಸವದಿ ಅವರು ಉಸ್ತುವಾರಿ ಸಚಿವರಾಗಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ನಾವು ಕೆಲಸ ಮಾಡುತ್ತೇವೆ. ಅಧಿಕಾರ ಕೊಟ್ಟಾಗ ಅದನ್ನು ಸರಿಯಾಗಿ ನಿಭಾಯಿಸಬೇಕು. ಜನಪ್ರತಿನಿಧಿಯಾದವನಿಗೆ ಅಭಿವೃದ್ಧಿಯ ಕಲ್ಪನೆಯಿರಬೇಕೇ ಹೊರತು ಹಾಗೂ ರಾಜಕೀಯ ದ್ವೇಷಭಾವನೆ ಇರಬಾರದು ಎಂದರು.

ಈ ಸಂದರ್ಭ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಜಿಪಂ ಮಾಜಿ ಸದಸ್ಯ ವಿ.ಎನ್. ನಾಯ್ಕ, ತಾಪಂ ಮಾಜಿ ಅಧ್ಯಕ್ಷ ಸಿ.ಆರ್. ನಾಯ್ಕ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಂತಕರ ವಿಚಾರಧಾರೆ ಇಂದಿಗೂ ಪ್ರಸ್ತುತ: ಉಮೇಶ
ಮಹಾಪುರುಷರ ತತ್ವಾದರ್ಶ ಸಾರ್ವಕಾಲಿಕ: ಭೀಮಣ್ಣ ನಾಯ್ಕ