ಗ್ಯಾರಂಟಿಗಳ ಭಾರದಲ್ಲಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ: ಮಾಜಿ ಸಚಿವ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್

KannadaprabhaNewsNetwork | Published : Apr 25, 2024 1:03 AM

ಸಾರಾಂಶ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಆರ್ಥಿಕ ಭಾರದಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ತಿಳಿಸಿದರು. ಅರಕಲಗೂಡಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರ ಸಭೆ

ಕನ್ನಡಪ್ರಭ ವಾರ್ತೆ ಅರಕಲಗೂಡು

ದೇಶವನ್ನು ಮುನ್ನಡೆಸಲು ಪ್ರಧಾನಿ ನರೇಂದ್ರ ಮೋದಿಯವರಂತಹ ಸಮರ್ಥ ನಾಯಕರ ಅಗತ್ಯವಿದೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕಿದೆ. ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಆರ್ಥಿಕ ಭಾರದಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿಗಳ ಭಾರದಲ್ಲಿ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು ನೌಕರರಿಗೆ ವೇತನ ನೀಡಲೂ ಹಣವಿಲ್ಲದ ಪರಿಸ್ಥಿತಿ ಉಂಟಾಗಿದೆ, ಇದನ್ನು ಮರೆಮಾಚಲು ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪಿಸುತ್ತಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಯಾರ ನೆರವಿಗೂ ಕಾಯದೆ ರೈತರ ಸಾಲ ಮನ್ನಾ ಮಾಡಿರಲಿಲ್ಲವೆ?, ಅದರಂತೆ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕಿತ್ತು’ ಎಂದು ಹೇಳಿದರು.

‘ಜಿಲ್ಲೆಯ ಅಭಿವೃದ್ಧಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಶ್ರಮ ಬಹಳಷ್ಟಿದೆ, ಕಳೆದ ವಿಧಾನಸಭಾ ಚುನಾವಣೆಯಲ್ಲೆ ಈ ಮೈತ್ರಿ ನಡೆದಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ, ನಮ್ಮದೇ ಸರ್ಕಾರ ಇರುತ್ತಿತ್ತು, ರಾಜ್ಯದ ವಿವಿಧೆಡೆಗಳಲ್ಲಿ ಸಂಚರಿಸಿ ಪರಿಸ್ಥಿತಿ ವೀಕ್ಷಿಸಿದ್ದೇನೆ, ಕಾಂಗ್ರೆಸ್ ಹತಾಶ ಸ್ಥಿತಿಯಲ್ಲಿದ್ದು 28 ಸ್ಥಾನಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಜಯಸಾಧಿಸುವುದು ಖಚಿತವಾಗಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಎ.ಮಂಜು ಮಾತನಾಡಿ, ‘ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಯಾರು ಏನೇ ಹೇಳಿದರೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುವುದು ಖಚಿತವಾಗಿದ್ದು ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಲಿದ್ದಾರೆ. ಯಾರು ಏನೇ ಹೆಳಿದರೂ ತಲೆ ಕೆಡಿಸಿಕೊಳ್ಳದೆ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ ಕಳಿಸಲು ಎಲ್ಲರೂ ಸಹಕಾರ ನೀಡಿ ಕಾರ್ಯ ನಿರ್ವಹಿಸಬೇಕಿದೆ’ ಎಂದು ಹೇಳಿದರು.

ಮುಖಂಡರಾದ ನಾಗೇಂದ್ರ, ಅನಿಲ್ ಕುಮಾರ್, ಹೂವಣ್ಣ, ನರಸೇಗೌಡ, ಪಾಪಣ್ಣ, ಅಲೀಂ ಪಾಶ ಇನ್ನಿತರರು ಪಾಲ್ಗೊಂಡಿದ್ದರು.

ಅರಕಲಗೂಡಿನಲ್ಲಿ ಮಂಗಳವಾರ ನಡೆದ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶಂಪುರ್ ಮಾತನಾಡಿದರು.

Share this article