ರಾಜ್ಯ ಸರ್ಕಾರದಿಂದ ಹಿಂದೂಗಳಲ್ಲಿ ಭಯ ಹುಟ್ಟಿಸುವ ಕೆಲಸ

KannadaprabhaNewsNetwork |  
Published : Jun 07, 2025, 02:57 AM IST
6ಎಚ್‌ಯುಬಿ30ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಸಂಘಟನೆಗಳ ಮುಖಂಡರ ಮೇಲೆ ಕೇಸ್‌ ದಾಖಲಿಸಿರುವುದನ್ನು ವಿರೋಧಿಸಿ ಶುಕ್ರವಾರ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ರಾಜ್ಯಾದ್ಯಂತ ಹಿಂದೂ ಕಾರ್ಯಕರ್ತರಿಗೆ ಹಿಂಸೆ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿಯೇ ನಡೆಯುತ್ತಿದೆ

ಹುಬ್ಬಳ್ಳಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ರಾಜ್ಯಾದ್ಯಂತ ಹಿಂದೂ ಕಾರ್ಯಕರ್ತರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಆರೋಪಿಸಿದರು.

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಸಂಘಟನೆಗಳ ಮುಖಂಡರ ಮೇಲೆ ಕೇಸ್‌ ದಾಖಲಿಸಿರುವುದನ್ನು ವಿರೋಧಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಶುಕ್ರವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ರಾಜ್ಯಾದ್ಯಂತ ಹಿಂದೂ ಕಾರ್ಯಕರ್ತರಿಗೆ ಹಿಂಸೆ ನೀಡಲಾಗುತ್ತಿದೆ. ಇದು ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿಯೇ ನಡೆಯುತ್ತಿದೆ. ಜಿಹಾದಿ ಮನಸ್ಥಿತಿ ಹೊಂದಿರುವವರಿಂದ ರಾಜ್ಯದಲ್ಲಿ ಅಶಾಂತಿವುಂಟಾಗುತ್ತಿದೆ. ಲವ್‌ ಜಿಹಾದ್‌, ಗೋಕಳ್ಳತನ, ಮತಾಂತರ ನಿಲ್ಲಿಸಿದರೆ ರಾಜ್ಯದಲ್ಲಿ ಶಾಂತಿ ನೆಲಸಲಿದೆ. ಈ ಕುರಿತಂತೆ ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನ ಗಲಭೆ ಕುರಿತಂತೆ ಪ್ರತಿಕ್ರಿಯಿಸಿ ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ರಾಜಕೀಯ ದುರುದ್ದೇಶದಿಂದ ಕೂಡಿದೆ. ಅಲ್ಲಿನ ಮುಸ್ಲಿಮರು ಗಡಿಪಾರು ಶಿಕ್ಷೆಗೆ ಒಳಗಾಗಿಲ್ಲ. ಕೇವಲ ನೋಟಿಸ್ ನೀಡಿದ್ದಾರೆ. ಮಂಗಳೂರಿನಲ್ಲಿ ವಿಧಾನಸಭೆ ಸ್ಪೀಕರ್‌ ಯು.ಟಿ. ಖಾದರ್‌,ಮೌಲ್ವಿಗಳ ಜೊತೆ ಚರ್ಚೆ ಮಾಡಿಯೇ ಹಿಂದೂಗಳ ಮೇಲೆ ಕೇಸ್‌ ಹಾಕಲಾಗುತ್ತಿದೆ. ರೌಡಿಶೀಟರ್‌, ಗೂಂಡಾ ಆ್ಯಕ್ಟ್, ಗಡಿಪಾರಿನಂತಹ ನಿರ್ಧಾರ ಮಾಡಲಾಗುತ್ತಿದೆ. ಕೇಸ್‌ ದಾಖಲಿಸಲು ಮಂಗಳೂರು ಕಮಿಷನರ್‌ ಸುಧೀರ್‌ ರೆಡ್ಡಿ ಮೇಲೆ ಒತ್ತಡ ಹಾಕಲಾಗುತ್ತಿದೆ ಎಂದರು.

ಇದಕ್ಕೂ ಮೊದಲು ಡಾ. ಬಿ.ಆರ್‌. ಅಂಬೇಡ್ಕರ್‌ ಸರ್ಕಲ್‌ನಲ್ಲಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪೊಲೀಸ್ ಆಯುಕ್ತ ಎನ್‌. ಶಶಿಕುಮಾರ್ ಅವರಿಗೆ ಶ್ರೀರಾಮಸೇನೆಯಿಂದ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಎಂ.ಚಂದ್ರಪ್ಪರಿಂದ ಸರ್ಕಾರಿ ಗುಡ್ಡ ಕಬಳಿಕೆ
ಇಂದು ಸ್ತುತಿ ಶಂಕರ- ಸ್ತೋತ್ರ ಮಹಾ ಸಮರ್ಪಣೆ