ಬೆಂಗಳೂರು : ಬರಗಾಲದಿಂದ ಬಳಲಿದ್ದ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ 3,454 ಕೋಟಿ ರು. ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ನೀಡಿದಂತೆ ಕಾಂಗ್ರೆಸ್ ಸರ್ಕಾರವೂ ಡಬಲ್ ಪರಿಹಾರ ನೀಡಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ. ಇದರಲ್ಲಿ ಕಾಂಗ್ರೆಸ್ ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ. ಸರ್ಕಾರ ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿ ಓಲೈಕೆ ರಾಜಕಾರಣ ಮಾಡಿದೆ. ಮುಸ್ಲಿಮರು ಹಲ್ಲೆ ಮಾಡಿದರೆ, ಪಾಕಿಸ್ತಾನ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುವುದಿಲ್ಲ. ಹಿಂದುಳಿದ ವರ್ಗಗಳ ಮತ ಕೇಳುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಹೋದರ ಸೋತಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕನಸು ಬಿದ್ದಿದ್ದು, ಅದಕ್ಕಾಗಿ ತಮಿಳುನಾಡು, ಉಡುಪಿಗೆ ಹೋಗಿ ಪೂಜೆ ಮಾಡಿದ್ದಾರೆ. ಡಿ.ಕೆ.ಸುರೇಶ್ ಅವರನ್ನು ಹೇಗೆ ಎಂಎಲ್ಸಿ ಮಾಡಬೇಕೆಂದು ಅವರು ಚಿಂತಿಸಿದ್ದಾರೆ. ಅವರಿಗೆ ಸೋಲಿನ ಭೀತಿಯಿಂದಲೇ ಪ್ರಚಾರಕ್ಕೆ ಪದೇ ಪದೆ ಬೆಂಗಳೂರು ಗ್ರಾಮಾಂತರಕ್ಕೆ ಹೋಗಿದ್ದಾರೆ. ಬಿಜೆಪಿಗೆ ಯಾವುದೇ ಭಯವಿಲ್ಲ. ನಮಗೆ 400 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.