ಎರಡು ದಿನ 5 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಭಾಗಿ
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಫೆ.3 ಮತ್ತು 4ರಂದು ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ನಡೆಯಲಿದ್ದು, ಸಮ್ಮೇಳನ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ ಏಕಬೋಟೆ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಘದ ರಾಜ್ಯ ಘಟಕದ ನೇತೃತ್ವ ಹಾಗೂ ಜಿಲ್ಲಾ ಸಂಘದ ಆತಿಥ್ಯ ಹಾಗೂ ಜಿಲ್ಲಾ ವರದಿಗಾರರ ಕೂಟದ ಸಹಯೋಗದಲ್ಲಿ ನಡೆಯುವ 2 ದಿನಗಳ ಸಮ್ಮೇಳನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 5 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.ಸಮ್ಮೇಳನದಲ್ಲಿ ಪತ್ರಕರ್ತರ ಸಮಸ್ಯೆಗಳು, ಪತ್ರಿಕೋದ್ಯಮದ ಮುಂದಿರುವ ಸವಾಲುಗಳು, ಭಾಷಾ ಜ್ಞಾನ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಗೋಷ್ಠಿ ನಡೆಯಲಿವೆ. ಹಿಂದಿನ ಸಮ್ಮೇಳನಗಳಲ್ಲಿ ಕೈಗೊಂಡ ನಿರ್ಣಯಗಳ ಪೈಕಿ ಕೆಲವನ್ನು ರಾಜ್ಯ ಸರ್ಕಾರವು ಈಡೇರಿಸಿದ್ದು, ಉಳಿದ ಹಾಗೂ ಪ್ರಸ್ತುತ ಪತ್ರಕರ್ತರ-ಪತ್ರಿಕೋದ್ಯಮದ ಸಮಸ್ಯೆಗಳ ಬಗ್ಗೆ ನಿರ್ಣಯ ಕೈಗೊಂಡು, ಸಮ್ಮೇಳನದ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಜಿಲ್ಲೆಯ ಜನ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸುವರು. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರೂ ಆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸೇರಿ ಜಿಲ್ಲೆಯ ಹಲವಾರು ದಾನಿಗಳ ಸಹಕಾರದಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನದ ನಂತರ ಅನ್ಯ ಜಿಲ್ಲೆಗಳ ಪ್ರತಿನಿಧಿಗಳು ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವರು ಎಂದು ವಿವರಿಸಿದರು.
25 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಸಮ್ಮೇಳನ
ನಾಡಿನ ಹಿರಿಯ ಸಾಹಿತಿ, ಪತ್ರಕರ್ತರೂ ಆಗಿದ್ದ ಡಿ.ವಿ.ಗುಂಡಪ್ಪನವರು 92 ವರ್ಷಗಳ ಹಿಂದೆ 1932ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವನ್ನು ಅಂದಿನ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ನೀಡಿದ ದೇಣಿಗೆಯೊಂದಿಗೆ ಸ್ಥಾಪಿಸಿದ್ದರು. ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಪತ್ರಕರ್ತರ ಏಕೈಕ ಬೃಹತ್ ಸಂಘಟನೆ ಇದಾಗಿದ್ದು, ಸುಮಾರು ಎಂಟೂವರೆ ಸಾವಿರಕ್ಕೂ ಹೆಚ್ಚು ಪತ್ರಕರ್ತರು ಸಂಘದ ಸಕ್ರಿಯ ಸದಸ್ಯರಾಗಿದ್ದಾರೆ.