ಕನ್ನಡಪ್ರಭ ವಾರ್ತೆ ಹಾಸನ
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯ ಕಾರ್ಮಿಕ ಇಲಾಖೆ ಕಳೆದ ಮೇ ೨೨ರಂದು ವಿವಿಧ ಉದ್ಯೋಗಗಳಿಗೆ ಪರಿಷ್ಕೃತ ಕನಿಷ್ಠ ವೇತನ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದರೂ, ಮೂರು ತಿಂಗಳು ಕಳೆದರೂ ರಾಜ್ಯ ಸರ್ಕಾರ ಅದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಲಕ್ಷಾಂತರ ಹೊರಗುತ್ತಿಗೆ ನೌಕರರು ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು, ದಿನೇದಿನೇ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ, ಜೀವನ ನಿರ್ವಹಣೆಯ ವೆಚ್ಚ ಹಾಗೂ ಕುಟುಂಬದ ಹೊರೆ ನಡುವೆಯೂ ಸರ್ಕಾರ ನ್ಯಾಯಸಮ್ಮತವಾದ ವೇತನವನ್ನು ನೀಡಲು ಮುಂದಾಗದಿರುವುದು ಕಾರ್ಮಿಕರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಕಳೆದ ಹತ್ತು ವರ್ಷಗಳಿಂದ ಬೆಲೆ ಏರಿಕೆಗೆ ಅನುಗುಣವಾಗಿ ಕನಿಷ್ಠ ವೇತನವನ್ನು ಪರಿಷ್ಕರಿಸಬೇಕೆಂಬ ಬೇಡಿಕೆಯನ್ನು ಕಾರ್ಮಿಕ ಸಂಘಟನೆಗಳು ನಿರಂತರವಾಗಿ ಮುಂದಿಟ್ಟಿದ್ದವು. ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು, ಮನವಿ ಸಲ್ಲಿಕೆ, ಧರಣಿ ಸೇರಿದಂತೆ ಹಲವು ಹೋರಾಟಗಳನ್ನು ನಡೆಸಿದರೂ ಸರ್ಕಾರ ಸ್ಪಂದಿಸಿರಲಿಲ್ಲ. ಅಂತಿಮವಾಗಿ ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ಕಾರ್ಮಿಕ ಇಲಾಖೆ ಸುಮಾರು ಶೇ.೪೦ರಷ್ಟು ವೇತನ ಹೆಚ್ಚಳದೊಂದಿಗೆ ಪರಿಷ್ಕೃತ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಿತು ಎಂದು ವಿವರಿಸಿದರು. ಆದರೆ, ಪರಿಷ್ಕೃತ ವೇತನ ಜಾರಿಗೆ ಕೆಲವು ಖಾಸಗಿ ಉದ್ಯಮಿಗಳು ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿರುವುದನ್ನು ನೆಪವನ್ನಾಗಿ ಮಾಡಿಕೊಂಡು ಸರ್ಕಾರವೇ ಅಧಿಸೂಚನೆ ಜಾರಿಗೊಳಿಸುವಲ್ಲಿ ಹಿಂದೆ ಸರಿದಿದೆ ಎಂದು ಆರೋಪಿಸಿದ ಅವರು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದನ್ನು ಕಾರಣವನ್ನಾಗಿ ಹೇಳಿ ಇಲಾಖೆಗಳು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುತ್ತಿವೆ ಎಂದು ಟೀಕಿಸಿದರು. ಸರ್ಕಾರಿ ಇಲಾಖೆಗಳ ಮುಖ್ಯಸ್ಥರು “ಸರ್ಕಾರದಿಂದ ಯಾವುದೇ ಸ್ಪಷ್ಟ ಸೂಚನೆ ಬಂದಿಲ್ಲ” ಎಂಬ ನೆಪ ಹೇಳುತ್ತಾ ಪರಿಷ್ಕೃತ ವೇತನ ಜಾರಿಗೆ ಮುಂದಾಗುತ್ತಿಲ್ಲ. ಕಾರ್ಮಿಕ ಇಲಾಖೆ ಕೇವಲ ವೇತನದ ಮಾಹಿತಿ ನೀಡುವ ಮಟ್ಟಕ್ಕೆ ಸೀಮಿತವಾಗಿದ್ದು, ಅಧಿಸೂಚನೆ ಅನುಷ್ಠಾನಗೊಳಿಸುವ ಹೊಣೆಗಾರಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿಲ್ಲ ಎಂದು ದೂರಿದರು.ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಲು ಯಾವುದೇ ಕಾನೂನು ತೊಡಕು ಇಲ್ಲ. ಆದರೂ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿರುವುದು ಕಾರ್ಮಿಕ ವಿರೋಧಿ ಧೋರಣೆಯಾಗಿದೆ. ಈ ಕಾರಣದಿಂದಲೇ ರಾಜ್ಯದ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರು ಆಗಸ್ಟ್ ೧೩ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಆಗ್ರಹ ಸಮಾವೇಶ ನಡೆಸಿ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಲಿದ್ದಾರೆ ಎಂದು ಹೇಳಿದರು. ಈ ಸಮಾವೇಶದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಹತ್ತು ಸಾವಿರಾರಕ್ಕೂ ಹೆಚ್ಚಿನ ಹೊರಗುತ್ತಿಗೆ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು. ನ್ಯಾಯಾಲಯದಲ್ಲಿ ಕನಿಷ್ಠ ವೇತನ ಜಾರಿಗೆ ಪ್ರತಿಕೂಲ ಆದೇಶ ಹೊರಬೀಳುವಂತಹ ಪರಿಸ್ಥಿತಿ ನಿರ್ಮಾಣವಾದರೆ ಅದರ ಸಂಪೂರ್ಣ ಹೊಣೆ ರಾಜ್ಯ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಸಂವಿಧಾನಬದ್ಧ ಕರ್ತವ್ಯವಾಗಿದೆ. ಈಗಾಗಲೇ ಅಧಿಸೂಚನೆ ಹೊರಡಿಸಿರುವ ವೇತನವನ್ನು ಅನುಷ್ಠಾನಗೊಳಿಸದೆ ವಿಳಂಬ ಮಾಡುವುದು ಲಕ್ಷಾಂತರ ಹೊರಗುತ್ತಿಗೆ ನೌಕರರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗುತ್ತದೆ. ಆದ್ದರಿಂದ ಯಾವುದೇ ವಿಳಂಬ ಮಾಡದೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸರೋಜಮ್ಮ, ಮನು, ರಾಜೇಂದ್ರ, ಮಂಜಮ್ಮ ಇತರರು ಉಪಸ್ಥಿತರಿದ್ದರು.