ಕನ್ನಡಪ್ರಭ ವಾರ್ತೆ ಮಂಗಳೂರು
2024ರ ನವೆಂಬರ್ 14 ರಿಂದ 20ರವರೆಗೆ ರಾಷ್ಟ್ರದಾದ್ಯಂತ ನಡೆಯಲಿರುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಈ ಬಾರಿ ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ಮುಖ್ಯ ಧ್ಯೇಯದೊಂದಿಗೆ ನಡೆಯಲಿದೆ. ಸಹಕಾರ ಸಪ್ತಾಹದ ಮೂರನೇ ದಿನ ‘ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಚಾರವಾಗಿ ರಾಜ್ಯಮಟ್ಟದ ಕಾರ್ಯಕ್ರಮ ನ.16ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಅವರು ಸೋಮವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಈ ಬಾರಿ ತುಂಬಾ ಅರ್ಥಪೂರ್ಣವಾಗಿ, ಅಭೂತಪೂರ್ವವಾಗಿ ಹಾಗೂ ಆದರ್ಶಪ್ರಾಯವಾಗಿ ನಡೆಸಿ, ಸಹಕಾರ ಕ್ಷೇತ್ರದ ಸಾಧನೆಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಅಗತ್ಯವಾಗಿದೆ. ಆದ್ದರಿಂದ ಸಹಕಾರ ಸಪ್ತಾಹ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಮೈಸೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಪ್ರಸಾದ್ ರೆಡ್ಡಿ ಮಾತನಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವತಿಯಿಂದ ರಾಜ್ಯ ಮಟ್ಟದ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಪ್ರತೀ ವರ್ಷ ಆಯೋಜನೆ ಮಾಡುತ್ತಿದೆ. ಈ ಕಾರ್ಯಕ್ರಮ ಇಡೀ ರಾಜ್ಯದಲ್ಲೇ ಮಾದರಿ ಕಾರ್ಯಕ್ರಮವಾಗಿ ನಡೆಸಿಕೊಂಡು ಬರುತ್ತಿದ್ದು, ಇದು ಶ್ಲಾಘನೀಯ ಸಂಗತಿಯಾಗಿದೆ ಎಂದರು.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಗಳಾದ ಬಿ. ಪ್ರಸಾದ್ ಕೌಶಲ್ ಶೆಟ್ಟಿ ಮತ್ತು ಬಿ. ಜಯಕರ ಶೆಟ್ಟಿ ಇಂದ್ರಾಳಿ, ಮಂಗಳೂರು ದಕ್ಷಿಣ ಕನ್ನಡ ಕೆಎಂಎಫ್ ಒಕ್ಕೂಟದ ಅಧ್ಯಕ್ಷರಾದ ಕೆ. ಪಿ. ಸುಚರಿತ ಶೆಟ್ಟಿ, ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ದೇವಿಪ್ರಸಾದ್ ಶೆಟ್ಟಿ, ಎಸ್. ಬಿ. ಜಯರಾಮ್ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಹರಿಶ್ಚಂದ್ರ, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕ್ ಕುಮಾರ್ ಶೆಟ್ಟಿ, ಕೆ.ಜೈರಾಜ್ ಬಿ.ರೈ, ಕುಶಾಲಪ್ಪ ಗೌಡ ಪಿ, ಎಸ್.ಎನ್.ಮನ್ಮಥ, ರಾಜೇಶ್ ರಾವ್, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಮತ್ತಿತರರಿದ್ದರು.ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್ ಪ್ರಸ್ತಾವಿಕ ಮಾತನಾಡಿದರು. ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯಕೆ. ಆರ್. ಸ್ವಾಗತಿಸಿದರು. ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ವಂದಿಸಿದರು.