ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿ.ಪಂ. ಹಾಗೂ ಶಾಲಾ ಶಿಕ್ಷಣ ಇಲಾಖೆ (ಪ.ಪೂ.)ಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಹೊನಲು- ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಜನವರಿ 15 ರಿಂದ ನಡೆಯಲಿರುವ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಟೆನ್ನಿಸ್, ಕಬಡ್ಡಿ, ಸ್ವಿಮ್ಮಿಂಗ್ ಸೇರಿದಂತೆ ಸುಮಾರು 27 ಕ್ರೀಡಾಕೂಟಗಳು ನಡೆಯಲಿವೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧೆಡೆಗಳಿಂದ 4,600 ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.ತುಮಕೂರು ಕ್ರೀಡೆಗೆ ಬಹಳ ಹೆಸರುವಾಸಿ ಆಗಿರುವ ಜಿಲ್ಲೆ. ನಮ್ಮ ಜಿಲ್ಲೆಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ತುಂಬಾ ಚೆನ್ನಾಗಿ ನಿರ್ವಹಿಸುತ್ತೇವೆ. ಇದಕ್ಕೆ ರಾಜ್ಯಮಟ್ಟದ ಹೊನಲು-ಬೆಳಕಿನ ಕಬಡ್ಡಿ ಪಂದ್ಯಾವಳಿ ಯಶಸ್ವಿಯಾಗಿ ನಡೆದಿರುವುದೇ ಸಾಕ್ಷಿಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಯಾರು ಹಿಂದುಳಿದಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಗಣತಿ ನಡೆದಿದ್ದು, ಈ ಗಣತಿಯಲ್ಲೂ ಸಹ ತುಮಕೂರು ಜಿಲ್ಲೆ ಮೊದಲನೇ ಸ್ಥಾನದಲ್ಲಿದೆ. ಇದಕ್ಕಾಗಿ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿದ್ದ 62 ತಂಡಗಳು ಈ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ 62 ಪಂದ್ಯಗಳನ್ನು ಆಡಿ, ಉತ್ತಮ ಪ್ರದರ್ಶನ ನೀಡಿವೆ. ಈ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲ ತಂಡಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದರು.
ಪ.ಪೂ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ್ ಹಾಗೂ ಜಿಲ್ಲಾಡಳಿತದ ಸಹಕಾರದಿಂದ ಈ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ ಎಂದರು.
ಇದೇ ಸಂದರ್ಭದಲ್ಲಿ ಹೊನಲು- ಬೆಳಕಿನ ಕಬಡ್ಡಿ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತಂಡ ಹಾಗೂ ಮಹಿಳಾ ವಿಭಾಗದಲ್ಲಿ ಜಯಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತಂಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಅವರು ಬಹುಮಾನ ವಿತರಿಸಿದರು.