ಬಳ್ಳಾರಿ: ಜ. 6 ಮತ್ತು 7ರಂದು ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಆಯೋಜನೆ ಮಾಡಲಾಗುತ್ತಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.
ಜ. 6ರಂದು ನಗರದ ವಿಮ್ಸ್ ಮೈದಾನದಲ್ಲಿ ಸಂಜೆ ವೇಳೆ ಮುಖ್ಯ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಜ್ಯ ಮಟ್ಟದ ಯುವಜನೋತ್ಸವ ಉದ್ಘಾಟನೆ ನೆರವೇರಲಿದೆ. ಪ್ರತಿ ಜಿಲ್ಲೆಯಿಂದ 35 ಸ್ಪರ್ಧಾಳುಗಳಂತೆ 1 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುತ್ತಿದ್ದು, ಜ. 6, 7ರಂದು ಎರಡು ದಿನಗಳ ಕಾಲ ಯುವಜನೋತ್ಸವವನ್ನು ವಿಭಿನ್ನ, ವರ್ಣರಂಜಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು. ಯುವ ಜನೋತ್ಸವದಲ್ಲಿ ಭಾಗವಹಿಸಲು ಆಗಮಿಸುವ ಸ್ಪರ್ಧಾಳುಗಳಿಗೆ ಉತ್ತಮ ವಸತಿ, ಗುಣಮಟ್ಟದ ಆಹಾರ, ಕುಡಿಯುವ ನೀರಿನ ವ್ಯವಸ್ಥೆ, ಭದ್ರತೆ, ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಎಲ್ಲ ವ್ಯವಸ್ಥೆಯನ್ನೂ ಅಚ್ಚುಕಟ್ಟಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಎರಡು ದಿನಗಳ ಕಾಲ ಬಳ್ಳಾರಿ ನಗರದಲ್ಲಿ ಹಬ್ಬದ ವಾತಾವರಣವಿರಬೇಕು. ಯುವಜನೋತ್ಸವಕ್ಕೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು. ಯುವಜನೋತ್ಸವದಲ್ಲಿ ನಡೆಯುವ ಜಾನಪದ ನೃತ್ಯ, ಹಾಡು, ಏಕಾಂಗಿ ನಾಟಕ, ಮತ್ತಿತರ ಸ್ಪರ್ಧೆಗಳ ಜತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚಿಸಿದರು.ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಲಾಗುತ್ತಿದ್ದು, ವೇದಿಕೆ ಸಮಿತಿ, ಊಟ ಮತ್ತು ವಸತಿ ಸಮಿತಿ, ಸಾರಿಗೆ ಸಮಿತಿ, ಆಹ್ವಾನ ಪತ್ರಿಕೆ ಮತ್ತು ಪ್ರಶಸ್ತಿ ಪತ್ರ ವಿತರಣಾ ಸಮಿತಿ, ಪ್ರಚಾರ ಸಮಿತಿಗಳನ್ನೊಳಗೊಂಡಂತೆ ವಿವಿಧ ಸಮಿತಿಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಡಿಸಿ ಅವರು ನಿರ್ದೇಶನ ನೀಡಿದರು. ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಜಿ. ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಹೊನ್ನೂರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಗ್ರೇಸಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.