ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ರಾಜ್ಯ ಅಸಹಕಾರ: ಎಸ್. ದತ್ತಾತ್ರಿ

KannadaprabhaNewsNetwork |  
Published : Apr 27, 2024, 01:20 AM IST
ಕೊಪ್ಪಳ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಮಾತನಾಡಿದರು. | Kannada Prabha

ಸಾರಾಂಶ

ಪಿಎಂ ವಿಶ್ವಕರ್ಮ ಯೋಜನೆಗೆ ಕೊಪ್ಪಳ ಜಿಲ್ಲೆಯಲ್ಲಿ 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ರಾಜ್ಯ ಸರ್ಕಾರ ಅದನ್ನು ಕೇಂದ್ರ ಕಳುಹಿಸಿಲ್ಲ. ಈ ಯೋಜನೆಗೆ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಆರೋಪಿಸಿದರು.

ಕೊಪ್ಪಳ: ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯಲ್ಲಿಯೇ 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಜಿಲ್ಲಾ ಉಸ್ತುವಾರಿ ಸಚಿವರೇ ಮುತುವರ್ಜಿ ವಹಿಸಿ, ಸಾರ್ವಜನಿಕರ ಅನುಕೂಲಕ್ಕಾಗಿ ಆಡಳಿತ ವ್ಯವಸ್ಥೆಯ ಮೂಲಕ ಪರಿಶೀಲನೆ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಬೇಕಾಗಿತ್ತು. ಆದರೆ, ಹಾಗೆ ಮಾಡದೆ ಕಾಲದೂಡುತ್ತಿದ್ದಾರೆ. ಹಾಗೊಂದು ವೇಳೆ ಈ ಯೋಜನೆ ಜಾರಿಯಾಗಿದ್ದೇ ಆದರೆ ಕೇಂದ್ರ ಸರ್ಕಾರಕ್ಕೆ ಹೆಸರು ಬರುತ್ತದೆ ಎಂದು ಅಸಹಕಾರ ತೋರುತ್ತಿದ್ದಾರೆ ಎಂದು ಆರೋಪಿಸಿದರು.

ದುರಹಂಕಾರಿ ಸಚಿವ: ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬೆತ್ತಲೆ ಮಾಡುವುದಾಗಿ ಹೇಳಿದ್ದಾರೆ. ಅಂದರೆ ಏನರ್ಥ? ಸಚಿವ ಶಿವರಾಜ ತಂಗಡಗಿ ದುರಹಂಕಾರಿಯಾಗಿದ್ದಾರೆ ಎಂದು ಮಾಜಿ ಶಾಸಕ ಬಸವರಾಜ ದಢೇಸ್ಗೂರು ಕಿಡಿಕಾರಿದರು.

ಹಿಂದೆ ಕೌರವರು, ಪಾಂಡವರ ಕಾಲದಲ್ಲಿ ಬೆತ್ತಲೆ ಮಾಡುತ್ತಿದ್ದರು. ಆದರೆ, ಈಗ ಅದನ್ನೇ ಮಾಡುತ್ತೇನೆ ಎನ್ನುವ ರೀತಿಯಲ್ಲಿ ಸಚಿವ ಶಿವರಾಜ ತಂಗಡಗಿ ಅಹಂಕಾರದಿಂದ ಮಾತನಾಡುತ್ತಿದ್ದಾರೆ. 2008ರಲ್ಲಿ ಚಪ್ಪಲಿ ಇಲ್ಲದೆ ಓಡಾಡುತ್ತಿದ್ದುದನ್ನು ಸಚಿವ ಶಿವರಾಜ ತಂಗಡಗಿ ಮರೆತಂತೆ ಕಾಣುತ್ತಿದೆ. ಆಗ ಗಾಲಿ ಜನಾರ್ದನ ರೆಡ್ಡಿ ಅವರ ನಿವಾಸದ ಮುಂದೆ ನಿಲ್ಲುತ್ತಿರಲಿಲ್ಲವೇ ಎಂದು ಪ್ರಶ್ನೆ ಮಾಡಿದರು.

ಇನ್ನು ಸಂಸದ ಸಂಗಣ್ಣ ಕರಡಿ ಅವರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ. ಅವರು ನಮ್ಮ ಪಕ್ಷದಲ್ಲಿದ್ದಾಗ ಅವರ ಪರವಾಗಿ ದುಡಿದಿದ್ದೇನೆ. ಈಗ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನರೇಂದ್ರ ಮೋದಿ ಅವರೇ ಪ್ರಧಾನಮಂತ್ರಿಯಾಗಬೇಕು ಎನ್ನುತ್ತಿದ್ದವರು ಈಗ ಏನೇನೂ ಅಭಿವೃದ್ಧಿಯಾಗಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ ತಾವು ಏನು ಮಾಡಿಲ್ಲ ಎಂದರ್ಥವಲ್ಲವೇ ಎಂದರು.

ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರು. ವಿಜಯಕುಮಾರ ಕುಡಿಗನೂರ, ಶಿವ ಬಸನಗೌಡ ಮೊದಲಾದವರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಕಳೇಬರ ಸಿಗದಿದ್ರೆ ಮುಸುಕುಧಾರಿ ಲೋಪವಲ್ಲ
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ 35 ಬೀದಿ ನಾಯಿಗಳ ಬಂಧನ