ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿ ಜನವರಿ 16 ರಿಂದ 22 ರವರೆಗೆ ನಡೆಯಲಿರುವ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟದ ಹಿನ್ನಲೆಯಲ್ಲಿ ಮಂಗಳವಾರ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ, ಅಲ್ಲಿನ ನವೀಕರಣ ಕಾರ್ಯಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿದರು.ಈ ವೇಳೆ ಕ್ರೀಡಾಕೂಟಕ್ಕೆ ಆಗಮಿಸುವ ಕ್ರೀಡಾಪಟುಗಳು ಹಾಗೂ ಪ್ರೇಕ್ಷಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ಮೂಲಸೌಕರ್ಯಗಳನ್ನು ಸಮಯ ಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್.ಟಿ.ಆರ್, ಅವರಿಗೆ ಸೂಚನೆ ನೀಡಿದರು. ಕ್ರೀಡಾಂಗಣದ ಶೌಚಾಲಯಗಳನ್ನು ಸದಾ ಸ್ವಚ್ಛವಾಗಿಡಬೇಕು, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದು ಹೇಳಿದರು. ಜೊತೆಗೆ ಕ್ರೀಡಾಂಗಣದಲ್ಲಿ ಉತ್ತಮ ಗುಣಮಟ್ಟದ ಬೆಳಕಿನ ವ್ಯವಸ್ಥೆ ಕಲ್ಪಿಸುವುದರೊಂದಿಗೆ, ಕಟ್ಟಡಕ್ಕೆ ಬಣ್ಣ ಬಳಸಿ ಕ್ರೀಡಾಂಗಣವನ್ನು ಆಕರ್ಷಕವಾಗಿ ರೂಪಿಸಬೇಕು ಎಂದು ತಿಳಿಸಿದರು. ಭದ್ರತೆ, ಸ್ವಚ್ಛತೆ ಹಾಗೂ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಿದರು.