ಹೊಸಪೇಟೆ: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಹಗರಣ ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರದ ₹83 ಕೋಟಿ ದುರ್ಬಳಕೆಯಾಗಿರುವುದು ಕೂಡ ಬೆಳಕಿಗೆ ಬಂದಿದೆ. ಈ ಎರಡೂ ಪ್ರಕರಣಗಳ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಎಸ್ಟಿ ಮೋರ್ಚಾದಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಜೂ. 28ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದಲ್ಲಿ ನಡೆದ ಅವ್ಯವಹಾರ ಬಗ್ಗೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಸರ್ಕಾರದ ಹಸ್ತಕ್ಷೇಪವಿಲ್ಲದೇ ಇಷ್ಟೊಂದು ದೊಡ್ಡ ಆರ್ಥಿಕ ಅವ್ಯವಹಾರ ನಡೆಯುವುದು ಸಾಧ್ಯವಿಲ್ಲ. ಈ ಹಣ ಲೋಕಸಭಾ ಚುನಾವಣೆ ವೆಚ್ಚಕ್ಕೆ ಬಳಕೆಯಾಗಿರುವ ಶಂಕೆ ಇದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು, ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದರು. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಚಂದ್ರಶೇಖರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯವಹಾರ ನಡೆದಿದೆ ಎಂದು ನಮೂದಾಗಿದೆ. ಈ ಪ್ರಕರಣದ ಹಿಂದೆ ಪ್ರಭಾವಿಗಳ ಹಸ್ತಕ್ಷೇಪ ಇರುವ ಬಗ್ಗೆ ಅನುಮಾನ ಇದೆ ಎಂದು ಆರೋಪಿಸಿದರು.ನಾಗೇಂದ್ರ ರಾಜೀನಾಮೆ ಒಂದೇ ಇದಕ್ಕೆ ಪರಿಹಾರವಾಗುವುದಿಲ್ಲ. ಅಧಿಕಾರಿ ಆತ್ಮಹತ್ಯೆಯ ಹೊಣೆಯನ್ನು ಯಾರು ಹೊರಬೇಕು? ಅನ್ಯಾಯಕ್ಕೊಳಗಾಗಿರುವ ಎಸ್‌ಟಿ ಸಮುದಾಯಕ್ಕೆ ನ್ಯಾಯ ಒದಗಿಸುವವರು ಯಾರು? ಈ ಪ್ರಕರಣ ಕುರಿತಂತೆ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬಿಜೆಪಿ ಎಸ್ಟಿ ಮೋರ್ಚಾದ ನೇತೃತ್ವದಲ್ಲಿ ಜೂ. 28ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಮುಖಂಡರಾದ ಅಶೋಕ್ ಜೀರೆ, ಅಯ್ಯಾಳಿ ತಿಮ್ಮಪ್ಪ, ಶಂಕರ್ ಮೇಟಿ, ಜಗದೀಶ್ ಕಮಟಗಿ, ದ್ವಾರಕೀಶ್, ಗುಜ್ಜಲ ಕಿರಣ್, ಚಂದ್ರು ದೇವಲಾಪುರ, ಅನುರಾಧ ಜೋಶಿ ಇದ್ದರು.