ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಮಂಗಳವಾರ ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತಾರಾಷ್ಟ್ರೀಯ ದಿನ ಆಚರಣೆಯ ದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ದ್ರವ್ಯಗಳ ವ್ಯಸನವು ಇಂದು ಸಮಾಜ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದೆ. ಯುವಜನತೆ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವಂತಹ ದುಶ್ಚಟಗಳಿಂದ ದೂರವಿರಬೇಕು. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಟೆಲಿಮನಸ್ಸ ಟೋಲ್-ಫ್ರೀ ಮಾನಸಿಕ ಆರೋಗ್ಯದ ಸಹಾಯವಾಣಿ ಸಂಖ್ಯೆ 14416 ಉಚಿತ ಕರೆ ಮಾಡುವ ಮೂಲಕ ಕನ್ನಡ ಭಾಷೆಯಲ್ಲಿಯೂ ಸಹಾಯ ಮಾಡುವ ಈ ಸಹಾಯವಾಣಿಗೆ ಕರೆ ಮಾಡಿ ತಮ್ಮ ಎಲ್ಲ ತರಹದ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.
ಇದೇ ವೇಳೆ ಜಿಲ್ಲಾಧಿಕಾರಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 26ರಂದು ಜಿಲ್ಲಾದ್ಯಂತ ಕಳೆದ ಒಂದು ವರ್ಷದ ಅವಧಿಯಲ್ಲಿ ವಶಪಡಿಸಿಕೊಂಡಿರುವ ಮಾದಕ ವಸ್ತುಗಳ ನಾಶಗೊಳಿಸುವ ಪ್ರಕ್ರಿಯೆ ಕೈಗೊಳ್ಳಲಾಗುವುದು. ಮಾದಕ ದ್ರವ್ಯಗಳ ವಿರುದ್ಧದ ಅಭಿಯಾನ ಕೇವಲ ಪೊಲೀಸ್ ಇಲಾಖೆ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬರ ಹೋರಾಟವಾಗಬೇಕು ಎಂದು ಹೇಳಿದರು.
ನಗರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜನ ಜಾಗೃತಿ ಜಾಥಾಗೆ ಜಿಪಂ ಸಿಇಒ ರಿಷಿ ಆನಂದ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಜಂಟಿಯಾಗಿ ಚಾಲನೆ ನೀಡಿದರು. ಈ ವೇಳೆ ಜಿಲ್ಲಾ ಔಷಧ ನಿಯಂತ್ರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಮನೋವೈದ್ಯಾಧಿಕಾರಿ ಡಾ.ಮಂಜುನಾಥ ಮಸಳಿ, ರಾಜಶೇಖರ ದೈವಾಡಿ, ಸಚಿನ ಬೋಂಬಳೆ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಜಾಥಾ ಸಿದ್ದೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿ ಸಮಾವೇಶಗೊಂಡಿತು.