ಕೊಪ್ಪಳ: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಅನುದಾನಿತ ಶಿಕ್ಷಣ ಸಂಸ್ಥೆಗಳ ಬೇಡಿಕೆಗಳನ್ನು ನಿಯಮಾನುಸಾರ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಳೆದ ವರ್ಷ 1.39 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರು. ಪ್ರಸಕ್ತ ವರ್ಷ 1.81 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ಸ್ಪಷ್ಟಪಡಿಸಿದರು.ಶೂ ಕಳಪೆಯಾಗಿಲ್ಲ, ಅಳತೆಯಲ್ಲಿ ವ್ಯತ್ಯಾಸ: ಶಾಲಾ ಮಕ್ಕಳಿಗೆ ವಿತರಿಸಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಶೂಗಳು ಕಳಪೆಯಾಗಿಲ್ಲ. ಆದರೆ ಕೆಲವು ಕಡೆ ಅಳತೆಯಲ್ಲಿ ವ್ಯತ್ಯಾಸವಾಗಿದೆ. ಒಂದು ವೇಳೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಿರುವುದು ಕಂಡುಬಂದರೆ ತೋರಿಸಲಿ, ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಬಸವ ಮಂಟಪ ಪುಸ್ತಕ ವಿಚಾರ: ಬಸವ ಮಂಟಪದ ಪುಸ್ತಕ ವಿಚಾರವಾಗಿ ಮಾತನಾಡಿದ ಸಚಿವರು, ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಬರಹಗಳನ್ನು ಬರೆಯಲಾಗುತ್ತಿದೆ. ಬಸವಣ್ಣನವರು ನಮ್ಮ ಸಾಂಸ್ಕೃತಿಕ ನಾಯಕರು. ಈ ವಿಚಾರದಲ್ಲಿ ಕಾನೂನಾತ್ಮಕವಾಗಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.