ಮಡಿಕೇರಿ: ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹಾವು ಕಡಿತ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ತ್ರೈಮಾಸಿಕ ಪರಿಶೀಲನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಾವು ಕಡಿತದ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆಯ ಕುರಿತಂತೆ ಮಾಹಿತಿ ಹೊಂದುವುದು ಅಗತ್ಯ. ಈ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ರೂಪಿಸುವಂತೆ ಸಲಹೆ ನೀಡಿದರು.ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಹಾವು ಕಡಿತದಿಂದ ಸಾವು-ನೋವುಗಳು ಸಂಭವಿಸದಂತೆ ತಡೆಯಲು ಅಧಿಕಾರಿಗಳು ಶ್ರಮಿಸಬೇಕು. ಜಿಲ್ಲೆಯ ಮತ್ತು ತಾಲ್ಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಇರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.144 ಹಾವು ಕಡಿತ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 144 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು, ಹಾವು ಕಡಿತಕ್ಕೆ ಚಿಕಿತ್ಸೆ ನೀಡಿ, ಗುಣಮುಖರಾಗಿದ್ದಾರೆ. ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದರು. ಕಂದಾಯ ಇಲಾಖೆ ಅಥವಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಜಿಲ್ಲಾ ಮಟ್ಟದಲ್ಲಿ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಹಾವು ಕಚ್ಚುವಿಕೆ ತಡೆ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸುವುದು, ಮಳೆಗಾಲಕ್ಕೂ ಮುನ್ನ ಸಿದ್ಧತಾ ಸಭೆಗಳನ್ನು ಆಯೋಜಿಸಿ ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲಾಗುವುದೆಂದು ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾವು ಕಚ್ಚುವಿಕೆ ತಡೆ ಕುರಿತು ಜನಜಾಗೃತಿ ಕಾರ್ಯಕ್ರಮ ಆಯೋಜಿಸುವುದು, ಗ್ರಾಮ ಮಟ್ಟದ ಆರೋಗ್ಯ ಮತ್ತು ಸ್ವಚ್ಛತಾ ಸಮಿತಿಗಳ ಮೂಲಕ ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದರು.ಜಿಲ್ಲಾಧಿಕಾರಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮನೆಗಳಲ್ಲಿ ಹಾವುಗಳು ಕಂಡು ಬಂದಲ್ಲಿ ಹಾವು ರಕ್ಷಕರ ಮಾಹಿತಿ ಇಲ್ಲದಿರುವುದರಿಂದ ಇಲಾಖೆಯ ಮೂಲಕ ಹಾವು ರಕ್ಷಕರ ಮೊಬೈಲ್ ನಂಬರ್‌ಗಳನ್ನು ಸಾರ್ವಜನಿಕವಾಗಿ ಮಾಹಿತಿ ನೀಡಬೇಕು ಎಂದರು.ಜಾಗೃತಿ ಕಾರ್ಯಕ್ರಮ: ಶಾಲಾ ಶಿಕ್ಷಣ ಇಲಾಖೆಯಿಂದ ಶಾಲೆಗಳಲ್ಲಿ ಹಾವು ಕಚ್ಚುವಿಕೆ ತಡೆ ಕುರಿತು ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುವುದು, ವಿದ್ಯಾರ್ಥಿಗಳಿಗೆ ಸುರಕ್ಷತಾ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸೆ ಕುರಿತು ಮಾಹಿತಿ ನೀಡಲಾಗುವುದು ಮತ್ತು ತುರ್ತು ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಮಾರ್ಗದರ್ಶಿನ ನೀಡಲಾಗುವು ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಶ್ರೀನಿವಾಸ್, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ನಂಜುಡಯ್ಯ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಅರಣ್ಯ ಇಲಾಖೆಯ ಅಧಿಕಾರಿ, ಜಿಲ್ಲಾ ಬಾಲ ಕಾರ್ಮಿಕ ಯಓಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಇದ್ದರು.