ರಾಮನಗರ: ಬಿಜೆಪಿ ಹಾಗೂ ಚುನಾವಣಾ ಆಯೋಗ ಶಾಮೀಲಾಗಿ ಮತಗಳ್ಳತನ ನಡೆಸುವ ಮೂಲಕ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಸಾಗರ್ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪೋಸ್ಟರ್ ಅಭಿಯಾನ ನಡೆಸಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮತಗಳ್ಳತನ ನಿಲ್ಲಿಸಿ ಎಂಬ ಪೋಸ್ಟರ್‌ಗಳನ್ನು ಸಾರಿಗೆ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಗಳಿಗೆ ಅಂಟಿಸಿದರು.ಈ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಸಾಗರ್ ಮಾತನಾಡಿದ, ಬಿಜೆಪಿ ಹಾಗೂ ಚುನಾವಣಾ ಆಯೋಗ ಶಾಮೀಲಾಗಿ ಮತಗಳ್ಳತನ ನಡೆಸಿದ ಪರಿಣಾಮ ಇಂದು ಬಿಜೆಪಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ. ಈ ವಿರುದ್ಧ ನಮ್ಮ ನಾಯಕ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಹೋರಾಟದ ಅಂಗವಾಗಿ ಯುವ ಕಾಂಗ್ರೆಸ್‌ನಿಂದ ಜಿಲ್ಲಾದ್ಯಂತ ಪೋಸ್ಟರ್ ಅಭಿಯಾನ ನಡೆಸಲಾಗುತ್ತಿದೆ ಎಂದರು.
ಲೋಕಸಭೆ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಬಿಜೆಪಿ ಪಕ್ಷ ಮತ್ತು ಚುನಾವಣಾ ಆಯೋಗ ಶಾಮೀಲಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಅಂದಾಜು 70ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿರುವುದನ್ನು ದಾಖಲೆ ಸಮೇತ ಸಾಬೀತು ಪಡಿಸಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ನಡೆದಿರುವ ಅಕ್ರಮವನ್ನು ಸಾಕ್ಷಿ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದರು.ದೇಶದಲ್ಲಿ 70ಕ್ಕಿಂತ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ 30 ಸಾವಿರ ಕಡಿಮೆ ಮತಗಳ ಅಂತರದಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಿದೆ. ಇದರ ಹಿಂದಿನ ಷಡ್ಯಂತ್ರವನ್ನು ರಾಹುಲ್ ಗಾಂಧಿರವರು ಬಹಿರಂಗಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನ್ಯಾಯಯುತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಜವಾಬ್ದಾರಿ. ಆದರೆ, ಬಿಜೆಪಿ ಜತೆ ಸೇರಿ ಚುನಾವಣೆಯಲ್ಲಿ ಅಕ್ರಮ ನಡೆಸುವ ಮೂಲಕ ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಕೇಂದ್ರದಲ್ಲಿ ಅಧಿಕಾರ ನಡೆಸಲು ನೈತಿಕ ಹಕ್ಕಿಲ್ಲ. ಮತಗಳ್ಳತನ ಮಾಡಿರುವ ಬಿಜೆಪಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಪೋಸ್ಟರ್ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮಾತನಾಡಿ, ಬಿಜೆಪಿಯೊಂದಿಗೆ ಶಾಮೀಲಾಗಿರುವ ಚುನಾವಣಾ ಆಯೋಗವು ಮತಗಳ್ಳತನಕ್ಕೆ ಕುಮ್ಮಕ್ಕು ನೀಡುತ್ತಿದೆ. ಒಂದೇ ಮನೆಯಲ್ಲಿ ಕ್ರೈಸ್ತ ,ಮುಸ್ಲಿಂ, ಜೈನ, ಸಿಖ್ಖರು, ಪಾರ್ಸಿ, ಹಿಂದೂಗಳು ಇರುವಂತಹ ಪ್ರಕರಣಗಳು ಮತದಾರರ ಪಟ್ಟಿಯಲ್ಲಿ ಕಂಡುಬಂದಿವೆ. ಅಕ್ರಮ ನಡೆಸಿ ಅಧಿಕಾರಕ್ಕೆ ಬಂದು ಸಂವಿಧಾನ ವಿರೋಧಿಯಾಗಿ ಸರ್ಕಾರ ನಡೆಸುತ್ತಿರುವ ಬಿಜೆಪಿ ವಿರುದ್ಧ ಯುವ ಕಾಂಗ್ರೆಸ್‌ನಿಂದ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಯುವ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಮುಷೀರ್ ಮಾತನಾಡಿ, ನಮ್ಮ ಜಿಲ್ಲೆಯ ನಾಲ್ಕೂ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಬಿಜೆಪಿ ಹಾಗೂ ಚುನಾವಣಾ ಆಯೋಗವು ನಡೆಸುತ್ತಿರುವ ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಲಾಗುವುದು. ಪ್ರಜೆಗಳ ಹಕ್ಕಿನ ಮಹತ್ವವನ್ನು ಅವರಿಗೆ ಅರಿವು ಮೂಡಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಭೂಷಣ್, ಚೇತನ್, ನಗರ ಘಟಕ ಉಪಾಧ್ಯಕ್ಷ ಸಯ್ಯನ್, ಗ್ರಾಮಾಂತರ ಬ್ಲಾಕ್ ಉಪಾಧ್ಯಕ್ಷ ದುರ್ಗಾಪ್ರಸಾದ್, ಯೋಗೇಶ್ ಮತ್ತಿತರರು ಪಾಲ್ಗೊಂಡಿದ್ದರು.
25ಕೆಆರ್ ಎಂಎನ್ 2.ಜೆಪಿಜಿರಾಮನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಸಾಗರ್ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಪೋಸ್ಟರ್ ಅಭಿಯಾನ ನಡೆಸಿದರು.
---------------------------