ಕೊಪ್ಪಳ: ಜೆಡಿಎಸ್ ಪಕ್ಷದ ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆಯನ್ನು ಮುಂದಿನ ವರ್ಷದ ಆರಂಭದಲ್ಲಿ ಕೊಪ್ಪಳದಲ್ಲಿ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪತನ ಕೊಪ್ಪಳದಿಂದಲೇ ಆರಂಭವಾಗಲಿ ಎಂದು ಇತ್ತೀಚೆಗೆ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಕುರಿತು ಕೊಪ್ಪಳದಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಜೊತೆಗಿನ ಮೈತ್ರಿ ಸಂಬಂಧ, ಪಕ್ಷದ ಸಂಘಟನೆ ದುರ್ಬಲವಾಗಿರುವ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಚಟುವಟಿಕೆಗಳು ಹಾಗೂ ಮುಂದಿನ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಸಭೆಯಲ್ಲಿ ಚರ್ಚಿಸುವ ನಿರೀಕ್ಷೆಯಿದೆ. ಸಭೆಗೆ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿ.ವಿ. ಚಂದ್ರಶೇಖರ ತಿಳಿಸಿದ್ದಾರೆ.