ಕಂಪ್ಲಿ: ಬೀದಿಬದಿ ವ್ಯಾಪಾರಿಗಳು ಡಿಜಿಟಲ್ ವ್ಯವಹಾರಗಳನ್ನು ಹೆಚ್ಚಾಗಿ ಅಳವಡಿಸಿಕೊಂಡು ಕ್ಯಾಶ್‌ಬ್ಯಾಕ್ ಸೇರಿದಂತೆ ಸರ್ಕಾರ ಹಾಗೂ ಬ್ಯಾಂಕ್‌ಗಳಿಂದ ಲಭ್ಯವಿರುವ ವಿವಿಧ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕಂದಾಯ ಅಧಿಕಾರಿ ಸಿ.ಪ್ರಶಾಂತ್ ಹೇಳಿದರು.ಪಟ್ಟಣದ ಪುರಸಭಾಂಗಣದಲ್ಲಿ ಶುಕ್ರವಾರ ಕೌಶಲಾಭಿವೃದ್ಧಿ ಇಲಾಖೆ ಹಾಗೂ ವಿವಿಧ ಬ್ಯಾಂಕ್‌ಗಳ ಸಹಯೋಗದಲ್ಲಿ ಆಯೋಜಿಸಿದ್ದ ಬೀದಿಬದಿ ವ್ಯಾಪಾರಿಗಳ ಸಾಲಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೀದಿಬದಿ ವ್ಯಾಪಾರಿಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಯೋಜನೆಗಳ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣ ಅನೇಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಸರ್ಕಾರ ನೀಡುವ ಅವಕಾಶಗಳನ್ನು ತಿಳಿದುಕೊಂಡು ಅವುಗಳನ್ನು ಸಕಾಲದಲ್ಲಿ ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಕೌಶಲಾಭಿವೃದ್ಧಿ ವ್ಯವಸ್ಥಾಪಕ ವಿ. ಪ್ರಾಣೇಶ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳು ಅನಧಿಕೃತ ಹಣಕಾಸು ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿದರಕ್ಕೆ ಸಾಲ ಪಡೆಯುವುದರಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಿಂದ ಅವರನ್ನು ರಕ್ಷಿಸುವ ಉದ್ದೇಶದಿಂದ ಸರ್ಕಾರ ಸಾಲಮೇಳಗಳನ್ನು ಆಯೋಜಿಸುತ್ತಿದೆ. ವ್ಯಾಪಾರಿಗಳು ಬ್ಯಾಂಕ್‌ಗಳಿಂದ ಪಡೆದ ಸಾಲವನ್ನು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡುವ ಮೂಲಕ ಬಡ್ಡಿಯ ಹೊರೆಯಿಂದ ತಪ್ಪಿಸಿಕೊಳ್ಳಬೇಕು ಎಂದು ಹೇಳಿದರು. ಆಹಾರ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಜಾರಿಯಲ್ಲಿರುವ ಒಟ್ಟು ಎಂಟು ಯೋಜನೆಗಳ ಸೌಲಭ್ಯಗಳನ್ನು ಅರ್ಹ ಬೀದಿಬದಿ ವ್ಯಾಪಾರಿಗಳು ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡರೆ ವ್ಯಾಪಾರ ವೃದ್ಧಿಯಾಗುವುದರ ಜೊತೆಗೆ ಕುಟುಂಬದ ಆರ್ಥಿಕ ಸ್ಥಿತಿಯೂ ಸುಧಾರಿಸುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಹತ್ತು ಮಂದಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಮುದಾಯ ಸಂಘಟನಾಧಿಕಾರಿ ಜಯಲಕ್ಷ್ಮಿ, ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳಾದ ವೀರಾಂಜನೇಯಲು, ಸುನೀಲ್, ಮಂಜುನಾಥ, ಪವನ್, ಸಚಿನ್ ಹಾಗೂ ಟಿವಿಸಿ ಸಮಿತಿ ಸದಸ್ಯರಾದ ಕೆ. ರಂಗಪ್ಪ, ವನಿತಾ, ಕೃಷ್ಣ, ಕನಕ, ಯಮುನಪ್ಪ, ಕೆ.ಖಾಸಿಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.