ವಕೀಲರಿಂದ ನ್ಯಾಯಾಲಯದ ಕಲಾಪಗಳ ಬಹಿಷ್ಕಾರ । ಗ್ರೇಡ್-2 ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಕೆ
ರಾಜ್ಯದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಮಾರಣಾಂತಿಕ ಹಲ್ಲೆ ಪ್ರಕರಣಗಳನ್ನು ಖಂಡಿಸಿ, ವಕೀಲರ ಸಂರಕ್ಷಣಾ ಕಾಯ್ದೆ-2023 ಅನ್ನು ಮತ್ತಷ್ಟು ಬಲಿಷ್ಠಗೊಳಿಸುವಂತೆ ಆಗ್ರಹಿಸಿ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಅಭಿಲಾಷ್ ಅವರ ನೇತೃತ್ವದಲ್ಲಿ ನ್ಯಾಯಾಲಯದ ಆವರಣದಿಂದ ಅಂಬೇಡ್ಕರ್ ವೃತ್ತದ ಮೂಲಕ ಬಿ.ಬಿ. ರಸ್ತೆಯಲ್ಲಿ ಮೆರವಣಿಗೆ ನಡೆಸಿದ ವಕೀಲರು, ಬಳಿಕ ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿದ ಅವರು, ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಗ್ರೇಡ್-2 ತಹಸೀಲ್ದಾರ್ ಮೂಲಕ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಬಲಿಷ್ಠಗೊಳಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸುವಲ್ಲಿ ಸರಕಾರ ವಿಫಲವಾಗಿದೆ. ಇಂತಹ ಅಹಿತಕರ ಘಟನೆಗಳನ್ನು ತಡೆಗಟ್ಟಲು ವಕೀಲರ ಸಂರಕ್ಷಣಾ ಕಾಯ್ದೆ-2023 ಅನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು. ವಕೀಲರ ಮೇಲೆ ಹಲ್ಲೆ ನಡೆದ ಸಂದರ್ಭದಲ್ಲಿ ಪೊಲೀಸ್ ಠಾಣೆಗಳಲ್ಲಿ ದಾಖಲಿಸುವ ಎಫ್ಐಆರ್ನಲ್ಲಿ ಈ ಕಾಯ್ದೆಯ ಕಲಂಗಳನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮುಂದಿನ ದಿನಗಳಲ್ಲಿ ವಕೀಲರ ಮೇಲಿನ ಹಲ್ಲೆ ಪ್ರಕರಣಗಳು ಮರುಕಳಿಸಿದರೆ ರಾಜ್ಯದ ಜಿಲ್ಲಾ ಮತ್ತು ತಾಲೂಕು ವಕೀಲರ ಸಂಘಗಳು ಹಾಗೂ ರಾಜ್ಯ ವಕೀಲರ ಪರಿಷತ್ ವತಿಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಸಿಕೆಬಿ-2 ವಕೀಲರ ಸಂರಕ್ಷಣಾ ಕಾಯ್ದೆ ಬಲಿಷ್ಠಗೊಳಿಸಲು ಆಗ್ರಹಿಸಿ ವಕೀಲರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಅಭಿಲಾಷ್ ನೇತೃತ್ವದಲ್ಲಿ ಗ್ರೇಡ್-2 ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.