ಕೊಪ್ಪಳ ಜಿಲ್ಲೆಯಲ್ಲಿಯೂ ಜೆಡಿಎಸ್,ಬಿಜೆಪಿ ಮೈತ್ರಿ ಬಲವರ್ಧನೆ - ಎಂ. ಕೃಷ್ಣಾರಡ್ಡಿ

KannadaprabhaNewsNetwork |  
Published : Nov 25, 2026, 02:15 AM IST
ಫೋಟೋ  ಕೊಪ್ಪಳ ನಗರದ ಜೆಡಿಎಸ್ ಕಚೇರಿಯಲ್ಲಿ ಸಭೆ  | Kannada Prabha

ಸಾರಾಂಶ

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಗುರುವಾರ ತೆರೆ ಬೀಳಲಿದೆ.

ಹಿರಿಯೂರು ಉಪಚುನಾವಣೆ: ಗುರುವಾರ ಎನ್‌ಡಿಎ ಅಭ್ಯರ್ಥಿ ಅಂತಿಮಕನ್ನಡಪ್ರಭ ವಾರ್ತೆ ಕೊಪ್ಪಳ

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಗುರುವಾರ ತೆರೆ ಬೀಳಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ ತಿಳಿಸಿದರು.

ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ತಲಾ ಐವರು ಹಿರಿಯ ಮುಖಂಡರು ಸಭೆ ಸೇರಲಿದ್ದಾರೆ. ಎರಡೂ ಪಕ್ಷಗಳ ಮುಖಂಡರು ಚರ್ಚಿಸಿ ಬಿಜೆಪಿ ಅಥವಾ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಬೇಕೆಂಬುದನ್ನು ನಿರ್ಧರಿಸಲಿದ್ದಾರೆ. ಅಭ್ಯರ್ಥಿಯ ಗೆಲುವಿಗೆ ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದರು.

ಕೊಪ್ಪಳದಲ್ಲಿ ಮೈತ್ರಿ ಗಟ್ಟಿಗೊಳಿಸುವ ತಂತ್ರ:-

ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಉತ್ತಮವಾಗಿದೆ. ಜಿಲ್ಲೆಯಲ್ಲಿ ಜೆಡಿಎಸ್ ಸಂಘಟನೆ ಗಣನೀಯವಾಗಿ ಬಲಗೊಂಡಿದ್ದು, ಇದು ಎನ್‌ಡಿಎ ಒಕ್ಕೂಟಕ್ಕೆ ಹೆಚ್ಚಿನ ಶಕ್ತಿ ನೀಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎನ್‌ಡಿಎ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಚುನಾವಣೆಯವರೆಗೆ ಕಾಯದೆ ಪ್ರತಿದಿನ ಜನರ ಮನೆಬಾಗಿಲಿಗೆ ತೆರಳಿ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ರಾಜ್ಯ ಸರಕಾರದ ಆಡಳಿತ ವೈಫಲ್ಯ, ಜನವಿರೋಧಿ ನೀತಿಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ:

ಕಾಂಗ್ರೆಸ್ ಆಡಳಿತದ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಾಗಿದೆ. ಕಳೆದ ಮೂರುವರೆ ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್ ಸರಕಾರದ ವೈಫಲ್ಯಗಳು ಜನರ ಮುಂದೆ ಬಂದಿವೆ. ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಹಿರಿಯೂರು ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಯಾರೇ ಆಗಿರಲಿ ಗೆಲುವು ನಮ್ಮದೇ ಎಂದು ಕೃಷ್ಣಾರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡುತ್ತಿರುವ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಸಂವಿಧಾನದ ಆಶಯದಂತೆ ಐದು ವರ್ಷಕ್ಕೊಮ್ಮೆ ಚುನಾವಣೆ ನಡೆಯಬೇಕು. ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಕಾಂಗ್ರೆಸ್ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದರು.

ಮಾಜಿ ಸಚಿವ ವೆಂಕಟರಾವ್ ನಾಡಗೌಡ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳನ್ನು ಜನರಿಗೆ ತಿಳಿಸುವ ಮೂಲಕ ಎನ್‌ಡಿಎ ಪರ ವಾತಾವರಣ ನಿರ್ಮಿಸಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಮೈತ್ರಿಕೂಟ ದಿಗ್ವಿಜಯ ಸಾಧಿಸಲಿದೆ ಎಂದರು.

ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಜಿಲ್ಲೆಯಲ್ಲಿನ ಪಕ್ಷದ ಸಂಘಟನಾ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ವಿರುದ್ಧದ ಆಡಳಿತ ವಿರೋಧಿ ಅಲೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿಕೂಟದ ಗೆಲುವಿನ ಸಾಧ್ಯತೆಗಳು ಹಾಗೂ ಜಿಲ್ಲೆಯ ರಾಜಕೀಯ ಬೆಳವಣಿಗೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಹಾಗೂ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವ ಬಗ್ಗೆಯೂ ಮುಖಂಡರು ಅಭಿಪ್ರಾಯ ಹಂಚಿಕೊಂಡರು.

ಪಕ್ಷದ ನಗರ, ತಾಲೂಕು ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಂಜ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ
ಅಂತೂ ಸುಂಕಸಾಳದ 34 ಮಕ್ಕಳಿಗೆ ಸಿಕ್ಕಿತು ಸುರಕ್ಷಿತ ನೆಲೆ!