ಕಾರವಾರ: ನೌಕರರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿ, ತಮ್ಮ ತಪ್ಪುಗಳ ಆತ್ಮಶೋಧನೆ ಮಾಡಿಕೊಂಡು, ಸಾರ್ವಜನಿಕ ಸೇವೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು. ದೈನಂದಿನ ಕರ್ತವ್ಯಗಳಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ, ಕರ್ತವ್ಯಲೋಪ, ಅನಗತ್ಯ ವಿಳಂಬ ಕಂಡುಬಂದಲ್ಲಿ ಲೋಕಾಯುಕ್ತ ಸಂಸ್ಥೆಯ ವತಿಯಿಂದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾ. ಕೆ.ಎನ್.ಫಣೀಂದ್ರ ಎಚ್ಚರಿಸಿದರು.ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ, ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳ, ದೂರುದಾರರ ಹಾಗೂ ಎದುರುದಾರರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಜನರು ತಮ್ಮ ಸಮಸ್ಯೆಗಳು ಹಾಗೂ ಪ್ರಕರಣಗಳ ವಿಚಾರಣೆಗಾಗಿ ದೂರದ ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಿ, ಅವರ ಮನೆಬಾಗಿಲಿಗೆ ನ್ಯಾಯ ಒದಗಿಸುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದ ಅವರು, ರಾಜ್ಯದಲ್ಲಿ ಸುಮಾರು 8 ಕೋಟಿ ಜನಸಂಖ್ಯೆಯಿದ್ದು, ಸುಮಾರು ಶೇ. 1ರಷ್ಟು ಸಾರ್ವಜನಿಕ ಹಾಗೂ ಸರ್ಕಾರಿ ನೌಕರರಿದ್ದಾರೆ. ಈ ಶೇ. 1ರಷ್ಟ್ಟು ನೌಕರರ ಮೇಲೆ ಉಳಿದ ಶೇ. 99ರಷ್ಟು ಜನರ ಹಕ್ಕುಗಳು, ಆಸ್ತಿ- ಪಾಸ್ತಿ, ಆರೋಗ್ಯ ಮತ್ತು ಸಾಮಾಜಿಕ ಜೀವನವನ್ನು ರಕ್ಷಿಸುವ ಗುರುತರ ಜವಾಬ್ದಾರಿಯಿದ್ದು, ಈ ಜವಾಬ್ದಾರಿಯನ್ನು ಅರಿತು, ಸಾರ್ವಜನಿಕ ಸೇವೆ ಮಾಡಲು ಸಿಕ್ಕಿರುವ ಈ ಅವಕಾಶವನ್ನು ಪ್ರತಿಯೊಬ್ಬ ನೌಕರನೂ ಸದ್ಬಳಕೆ ಮಾಡಿಕೊಳ್ಳಬೇಕು ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.ಸಂವಿಧಾನವು ಸರ್ವರಿಗೂ ಸಮಬಾಳು ಸಮ ಪಾಲು ತತ್ವವನ್ನು ಅಳವಡಿಸಿಕೊಂಡಿದ್ದು, ಸರ್ಕಾರಗಳು ಜಾರಿಗೆ ತರುವ ವಿವಿಧ ಯೋಜನೆಗಳ ಪ್ರಯೋಜವನ್ನು ಸಮಾಜದ ಪ್ರತಿಯೊಬ್ಬರಿಗೂ ಸಮಾನವಾಗಿ ದೊರೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲ ಸಾರ್ವಜನಿಕ ನೌಕರರಿಗಿದೆ. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಮತ್ತು ಅವರ ಸಾರ್ವಜನಿಕರ ಸಮಸ್ಯೆಗಳನ್ನು ಸಮಾಧಾನದಿಂದ ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಅಥವಾ ಅರ್ಜಿಗಳಿಗೆ ಕಾನೂನಾತ್ಮಕ ಹಿಂಬರಹವನ್ನು ತಪ್ಪದೇ ನೀಡಬೇಕು ಎಂದರು. ಸಾರ್ವಜನಿಕರ ದೂರುಗಳು ಮತ್ತು ಕುಂದುಕೊರತೆಗಳ ಬಗ್ಗೆ ಅವರಿದ್ದಲ್ಲಿಯೇ ತೆರಳಿ, ಪರಿಶೀಲಿಸಿ, ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಕಾರವಾರದಲ್ಲಿ ಲೋಕಾಯುಕ್ತ ಸಂಸ್ಥೆಯ ವತಿಯಿಂದ ತನಿಖೆ/ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ಆಯೋಜಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ದೂರುದಾರರು ಉಪಸ್ಥಿತರಿದ್ದರು.