ಮುಂಡರಗಿ: ಬರ ಪರಿಹಾರ, ಕುಡಿಯುವ ನೀರು ಹಾಗೂ ಬೆಳೆನಷ್ಟದ ಕುರಿತು ತಾಲೂಕು ಮಟ್ಟದ ಅಧಿಕಾರಿಗಳು ನೀಡಿದ ಅಪೂರ್ಣ ಮತ್ತು ಅಸ್ಪಷ್ಟ ಮಾಹಿತಿಯ ವಿರುದ್ಧ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ವಾರದೊಳಗೆ ಸರಿಯಾದ ವರದಿ ನೀಡದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವ ಬಸವರಾಜ ರಾಯರಡ್ಡಿ ಅವರು ಕೃಷಿ, ತೋಟಗಾರಿಕೆ, ಗ್ರಾಮೀಣ ನೀರು ಸರಬರಾಜು ಹಾಗೂ ಪುರಸಭೆ ಅಧಿಕಾರಿಗಳಿಗೆ ಎಚ್ಚರಿಸಿದರು.ಶುಕ್ರವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕಿನ ಬರ ಪರಿಸ್ಥಿತಿ ಪರಿಶೀಲನೆ ನಡೆಸಿ ನಂತರ ಜರುಗಿದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಭೆಯಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಉಪವಿಭಾಗಾಧಿಕಾರಿ ಗಂಗಪ್ಪ, ಸಿ.ಆರ್. ಮುಂಡರಗಿ, ಚೇತನಾ ಪಾಟೀಲ, ತಹಸೀಲ್ದಾರ್ ಎರ್ರಿಸ್ವಾಮಿ ಪಿ.ಎಸ್., ಡಿವೈಎಸ್‌ಪಿ ಪ್ರಭುಗೌಡ ಕಿರೇದಳ್ಳಿ ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಜಿಲ್ಲೆಯಲ್ಲಿ ಶೇ. 32 ಮಳೆ ಕೊರತೆ: ರಾಯರಡ್ಡಿ
ಡಂಬಳ: ಮಳೆ ಅಭಾವದಿಂದ ಬೆಳೆ ಹಾನಿಗೊಳಗಾದ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮಗಳ ರೈತರ ಜಮೀನುಗಳಿಗೆ ನೂತನ ಸಚಿವ ಬಸವರಾಜ ರಾಯರಡ್ಡಿ ಶುಕ್ರವಾರ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿ ಪರಿಶೀಲಿಸಿದರು.ಬಳಿಕ ಸಚಿವರು ಮಾತನಾಡಿ, ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಉಂಟಾಗಿದ್ದು, ಹಾಳಾದ ಬೆಳೆ ಖುದ್ದಾಗಿ ವೀಕ್ಷಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಸರಾಸರಿ ಶೇ. 32ರಷ್ಟು ಮಳೆ ಆಗಿಲ್ಲ ಎನ್ನುವ ಮಾಹಿತಿ ಇದ್ದು, ಇನ್ನೂ ಸೂಕ್ತ ಪರಿಶೀಲನೆ ನಡೆಸಲಾಗುವುದು. ಪ್ರತಿಯೊಬ್ಬ ರೈತರಿಗೂ ಪರಿಹಾರ ದೊರೆಯಬೇಕು. ಕೃಷಿ ಇಲಾಖೆ ಅಧಿಕಾರಿಗಳು ಹಾನಿಯ ಸಮಗ್ರ ವರದಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ಯಾವುದೇ ರೈತರು ಪರಿಹಾರದಿಂದ ವಂಚಿತರಾಗದಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.ರಾಜ್ಯ ಸರ್ಕಾರ ರೈತರ ಪರವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ. ಮಾರ್ಗಸೂಚಿಗಳ ಪ್ರಕಾರವೇ ಬೆಳೆ ಪರಿಹಾರ ರೈತರ ಖಾತೆಗಳಿಗೆ ಜಮೆ ಮಾಡಲಾಗುವುದು. ನಾನು ರೈತರಿಗೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಸುಜಾತಾ ದೊಡ್ಡಮನಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್., ಕೃಷಿ ಜಂಟಿ ಕೃಷಿ ನಿರ್ದೇಶಕರಾದ ಚೇತನಾ ಪಾಟೀಲ, ತೋಟಗಾರಿಕಾ ಜಂಟಿ ನಿರ್ದೇಶಕರು ಚಿದಾನಂದ, ಗದಗ ಜಿಲ್ಲೆಯ ಮತ್ತು ಮುಂಡರಗಿ ತಾಲೂಕಿನ ಹಿರಿಯ ಅಧಿಕಾರಿಗಳು, ರೈತ ಸಂಘಟನೆಗಳು, ರೈತರು ಇದ್ದರು.