ಕೊಪ್ಪಳ:
ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಳ್ಳಸಾಗಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಂಡು ಸಾಗಣಿಕೆ ಕಡಿವಾಣ ಹಾಕಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಡಿತರ ಧಾನ್ಯವನ್ನು ಮಾರಾಟ ಮಾಡಲು ಅವಕಾಶವಿಲ್ಲ. ಈ ಕುರಿತು ಜನರಿಗೆ ಅರಿವು ಮೂಡಿಸಬೇಕು. ಪಡಿತರ ಚೀಟಿಗೆ ಈ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿ ಮೂಲಕವೇ ತಿಳಿಸಬೇಕು. ಪಡಿತರ ವಿತರಿಸುವ ಸಮಯ ಹೆಚ್ಚಿಸಿದ್ದು ಅದರಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಬೇಕು. ಆಹಾರ ಸಾಮಾಗ್ರಿ ವಿತರಿಸುವ ಮುನ್ನ ಅದರ ಗುಣಮ್ಟ ಪರಿಶೀಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು.ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾದ ಅರ್ಜಿ ಪರಿಶೀಲಿಸಿ ತಾಂತ್ರಿಕ ಸಮಸ್ಯೆ ಇದ್ದರೆ ಸರಿಪಡಿಸಿ. ವಿದ್ಯುತ್ ಬಿಲ್ ಬಾಕಿ ವಸೂಲಾತಿ ವೇಳೆ ಜೆಸ್ಕಾಂ ಅಧಿಕಾರಿ, ಸಿಬ್ಬಂದಿ ಜನರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸೂಚಿಸಿದ ಅವರು, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ಉತ್ತಮ ಪ್ರಗತಿ ಸಾಧಿಸಿದ್ದು, ಮುಂದೆಯೂ ಅದೇ ರೀತಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಕ್ರಮಕೈಗೊಳ್ಳಬೇಕು ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ 3,17,804 ಫಲಾನುಭವಿಗಳಿಗೆ ಜೂನ್ ಅಂತ್ಯದವರೆಗೆ ₹ 1277 ಕೋಟಿ, ಗೃಹಜ್ಯೋತಿ ಯೋಜನೆಯಡಿ ಜುಲೈ ಅಂತ್ಯದವರೆಗೆ 2,78,151 ಗ್ರಾಹಕರಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆತಿದ್ದು ₹ 295.8 ಕೋಟಿ ಖರ್ಚಾಗಿದೆ. ಜಿಲ್ಲೆಯಲ್ಲಿ 37,204 ಅಂತ್ಯೋದಯ (ಎಎವೈ), 2,91,065 ಪಿಎಚ್‌ಎಚ್ (ಬಿಪಿಎಲ್) ಕಾರ್ಡ್‌ಗಳಿದ್ದು ಅನ್ನಭಾಗ್ಯ ಯೋಜನೆಯಡಿ ಹಣದ ಬದಲಾಗಿ ಫೆಬ್ರವರಿಯಿಂದ ಈ ವರೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಇದರ ಜತೆಗೆ ಎಎವೈ ಮತ್ತು ಪಿಎಚ್‌ಎಚ್ (ಎನ್‌ಎಫ್‌ಎಸ್‌ಎ ಸೆಂಟ್ರಲ್) ಕಾರ್ಡ್‌ಗಳಿಗೆ ಈ ಬಾರಿಯೂ ಜೋಳ ವಿತರಿಸಲಾಗಿದೆ. ಶಕ್ತಿ ಯೋಜನೆಯಡಿ ಜುಲೈನಲ್ಲಿ 32,25,842 ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು ₹ 303,45,72,493 ಖರ್ಚಾಗಿದೆ. ಯುವನಿಧಿ ಯೋಜನೆಯಡಿ ಜೂನ್‌ನಲ್ಲಿ 6,813 ಫಲಾನುಭವಿಗಳು ನೋಂದಣಿಯಾಗಿದ್ದು ಜೂನ್ ಅಂತ್ಯದವರೆಗೆ ₹ 17.20 ಕೋಟಿ ಪಾವತಿಸಲಾಗಿದೆ ಎಂದು ಆಯಾ ಇಲಾಖೆ ಅಧಿಕಾರಿಗಳು ತಿಳಿಸಿದರು.ಸಭೆಯಲ್ಲಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ನಾಗರಾಜ ಅರಳಿ, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ ಸೇರಿದಂತೆ ಅಧಿಕಾರಿಗಳು ಇದ್ದರು.