ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣಾಧಿಕಾರಿ
ಪಿ.ಸಿ & ಪಿ.ಎನ್.ಡಿ.ಟಿ ಕಾಯ್ದೆ ಅಡಿ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಲಿಂಗ ಆಯ್ಕೆಗೆ ಅವಕಾಶವಿಲ್ಲ. ಆದಾಗ್ಯೂ ಇಂತಹ ಕಾನೂನು ಬಾಹಿರ ಕ್ರಮಗಳಲ್ಲಿ ಭಾಗಿಯಾದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಮತ್ತು ಎಂ.ಟಿ.ಪಿ ಕಾಯ್ದೆಯ ಅಡಿ ಬರುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ-1994ರಡಿಯಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕುರಿತಂತೆ ಯಾವುದೇ ರೀತಿಯ ಜಾಹೀರಾತು ನೀಡುವಂತಿಲ್ಲ. ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶವಿದೆ. ಈ ಕಾಯ್ದೆಯಡಿ ತಪಾಸಣಾ ಮತ್ತು ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ತಪಾಸಣಾ ಸಮಿತಿ ರಚಿಸಲಾಗಿದೆ. ತಪಾಸಣಾ ಸಮಿತಿಯು ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಲಹಾ ಸಮಿತಿ ಸಭೆಯಲ್ಲಿ ವರದಿ ನೀಡಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ್ ಎಂ.ಎಚ್. ಮಾತನಾಡಿ, ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರಿಗೆ ಕಾರಾಗೃಹ ಶಿಕ್ಷೆ ಸಹಿತ ದಂಡ ವಿಧಿಸಲಾಗುವುದು. ಮೊದಲ ಅಪರಾಧಕ್ಕೆ 5 ವರ್ಷ ವೈದ್ಯಕೀಯ ಪರವಾನಿಗೆ ರದ್ದುಪಡಿಸುವುದು. ನಂತರದ ಅಪರಾಧಕ್ಕೆ ಸಂಬಂಧಿಸಿದ ವೈದ್ಯರ ವೈದ್ಯಕೀಯ ಪರವಾನಿಗೆ ರಾಜ್ಯ ವೈದ್ಯಕೀಯ ಮಂಡಳಿಯಿಂದ ಶಾಶ್ವತವಾಗಿ ತೆಗೆದು ಹಾಕಿ, ವೈದ್ಯಕೀಯ ವೃತ್ತಿ ನಡೆಸಲು ಆಜೀವ ನಿಷೇಧ ಹೇರಲಾಗುವುದು. ಒಂದು ವೇಳೆ ಸ್ವತಃ ಮಹಿಳೆ, ಆಕೆಯ ಪತಿ ಅಥವಾ ಸಂಬಂಧಿಕರು ಭ್ರೂಣ ಲಿಂಗ ಪತ್ತೆಗೆ ಯತ್ನಿಸಿ, ವೈದ್ಯರಿಗೆ ಒತ್ತಡ ಹೇರಿದಲ್ಲಿ ಅವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹50 ಸಾವಿರದಿಂದ 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲಾ ಮಟ್ಟದ ಜಿಲ್ಲಾ ಸಲಹಾ ಸಮಿತಿ (ಡಿಎಸಿ) ಹಾಗೂ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ (ಡಿಐಎಂಇ) ಸಮಿತಿಯನ್ನು ಜಿಲ್ಲಾ ಸಕ್ಷಮ ಪ್ರಾಧಿಕಾರಿ, ಪಿ.ಸಿ. ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಹಾಗೂ ಜಿಲ್ಲಾಧಿಕಾರಿಗಳ ಅನುಮೋದನೆಯಂತೆ 2024ರ ಜೂನ್ 13ರಂದು ಪುನರ್ ರಚಿಸಲಾಗಿದ್ದು, ಜಿಲ್ಲಾ ಮಟ್ಟದ ಸಲಹಾ ಸಮಿತಿಗೆ ಅಧ್ಯಕ್ಷರನ್ನಾಗಿ ಮುನಿರಾಬಾದ್ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞ ಡಾ. ಕೆ.ಎಚ್. ತೊಗರಿ ಅವರನ್ನು ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.