ಹಾವೇರಿ: ಜಿಲ್ಲೆಯ ಎಲ್ಲ ಶಾಲೆಗಳು, ಕಾಲೇಜುಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ತೀವ್ರ ನಿಗಾವಹಿಸಿ, ಮಾದಕ ವಸ್ತುಗಳ ಬಳಕೆ ತಡೆಗಟ್ಟಲು ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾ ಮಟ್ಟದ Narco Coordination Centre (NCORD) ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ದುರ್ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.ವೈದ್ಯಕೀಯ ಶಿಕ್ಷಣ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ನಿರಂತರವಾಗಿ ತಪಾಸಣೆಗೆ ಒಳಪಡಿಸಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿ, ಅಧಿಕಾರಿಗಳು ತಮ್ಮ ಮೇಲೆ ನಿಗಾವಹಿಸಿದ್ದಾರೆ ಎಂಬ ಅರಿವು ಮೂಡಲಿದ್ದು, ತಪ್ಪು ಚಟುವಟಿಕೆಗಳಿಂದ ದೂರ ಉಳಿಯುವ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು.ಜಿಲ್ಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ನಡೆಯುವ ಜಾತ್ರೆ, ಸಂತೆ ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ವಿವಿಧ ಸರ್ಕಾರಿ ಇಲಾಖೆಗಳು ನಡೆಸುವ ಕಾರ್ಯಕ್ರಮಗಳು, ಗ್ರಾಮಸಭೆಗಳು, ಗ್ರಾಮೀಣ ಮಟ್ಟದಲ್ಲಿ ನಡೆಯುವ ಮದುವೆಗಳು, ಸಂಸ್ಕೃತಿಕ ಚಟುವಟಿಕೆ ಹಾಗೂ ಇನ್ನಿತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಾದಕ ವ್ಯಸನದ ಅಪಾಯಗಳ ಕುರಿತು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಇತ್ತೀಚೆಗೆ ಅಂಜುಮನ್ ಸಮಿತಿಯ ಸದಸ್ಯರು ತಮ್ಮ ಸಮುದಾಯದ ಯುವಕರು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗದಂತೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿರುವುದನ್ನು ಉಲ್ಲೇಖಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಅಂಜುಮನ್ ಸಮಿತಿಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮುದಾಯದ ಸಹಕಾರದೊಂದಿಗೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳು ಈ ವಿಷಯದಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕೃಷಿಭೂಮಿಗಳಲ್ಲಿ ಹಾಗೂ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಮಾದಕ ಸಸ್ಯಗಳನ್ನು ಬೆಳೆಯುತ್ತಿರುವ ಬಗ್ಗೆ ಅನುಮಾನಗಳಿರುವುದರಿಂದ ಅಗತ್ಯ ಪರಿಶೀಲನೆ ನಡೆಸಿ, ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಮಾದಕ ವ್ಯಸನ ವಿರೋಧಿ ಜಾಗೃತಿ ಬ್ಯಾನರ್‌ಗಳು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುತಿಲ್ಲ. ಅವುಗಳನ್ನು ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಮರುಅಳವಡಿಸಿ ಪರಿಣಾಮಕಾರಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.ಮಾದಕ ವ್ಯಸನಕ್ಕೆ ಒಳಗಾದವರ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಸನಮುಕ್ತ ಕೇಂದ್ರವನ್ನು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಾನದಂಡಗಳಿಗೆ ಅನುಗುಣವಾಗಿ ಕೇಂದ್ರವನ್ನು ಸ್ಥಾಪಿಸಿ ಸಮರ್ಪಕ ಸೇವೆ ಒದಗಿಸಬೇಕು. ಕೇವಲ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ವ್ಯವಸ್ಥೆ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಸಮಗ್ರ ಚಿಕಿತ್ಸೆ, ಸಮಾಲೋಚನೆ ಹಾಗೂ ಪುನರ್ವಸತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಾಟವನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನಿರಂತರವಾಗಿ ಜಾಗೃತಿ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಯುವ ಸಮೂಹವನ್ನು ವ್ಯಸನದಿಂದ ದೂರವಿಡಲು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಸಮಗ್ರ ಅಭಿಯಾನ ನಡೆಸಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ ೨೦೨೪, ೨೦೨೫ ಹಾಗೂ ೨೦೨೬ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ವಿವಿಧ ಶಾಲೆಗಳು, ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಇದುವರೆಗೆ ೯೬೦ ಮಾದಕ ವಸ್ತು ಬಳಕೆ ನಿಯಂತ್ರಣ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಗಿದೆ ಎಂದು ಹೇಳಿದರು.ನ್ಯಾಯಾಲಯದ ಆದೇಶದಂತೆ ಪೊಲೀಸ್ ಹಾಗೂ ಅಬಕಾರಿ ಇಲಾಖೆಯ ಸಹಯೋಗದಲ್ಲಿ ೨೦೨೪ರಿಂದ ೨೦೨೬ರವರೆಗೆ ೪೧ ಪ್ರಕರಣಗಳಿಗೆ ಸಂಬಂಧಿಸಿದಂತೆ ೧೧೬.೫೭೦ ಕೆಜಿ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದ್ದು, ಇದರ ಒಟ್ಟು ಮೌಲ್ಯ ರು. ೩೮,೭೦,೨೭೬ ಆಗಿದೆ ಎಂದು ಮಾಹಿತಿ ನೀಡಿದರು.ಇದೇ ಅವಧಿಯಲ್ಲಿ ಜಿಲ್ಲೆಯಲ್ಲಿ ದಾಖಲಾಗಿರುವ ೩೨ ಸೀಜರ್ ಪ್ರಕರಣಗಳಲ್ಲಿ ೭೬ ಆರೋಪಿತರನ್ನು ಗುರುತಿಸಿ, ಅವರಿಂದ ೧೦೯.೮೭೫ ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಅಂದಾಜು ಮೌಲ್ಯ ರೂ.೪೧,೩೪,೮೨೫ ಎಂದು ತಿಳಿಸಿದರು.ಸ್ಥಾಯಿ ಆದೇಶ ಸಂಖ್ಯೆ ೧೦೫೨ರ ಅನ್ವಯ ''''ಮಾದಕ ದ್ರವ್ಯ ಮುಕ್ತ ಕರ್ನಾಟಕ'''' ನಿರ್ಮಾಣದ ಉದ್ದೇಶದಿಂದ ಜಿಲ್ಲೆಯಲ್ಲಿ ೧೦೯ ವ್ಯಸನಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ ೭೭ ಮಂದಿ ವ್ಯಸನ ಮುಕ್ತರಾಗಿದ್ದಾರೆ. ಈ ಕಾರ್ಯಕ್ಕಾಗಿ ೧೦೮ ಸಿಬ್ಬಂದಿಯನ್ನು ನಿಯೋಜಿಸಿ ನಿರಂತರ ಮೇಲ್ವಿಚಾರಣೆ ಹಾಗೂ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸಾಮಾಜಿಕ ಸಂಘಟನೆಗಳು ತಮ್ಮ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆಯನ್ನು ಆಹ್ವಾನಿಸಿದರೆ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಜಿಲ್ಲೆಯನ್ನು ಮಾದಕ ವಸ್ತು ಮುಕ್ತವಾಗಿಸಲು ಎಲ್ಲ ಇಲಾಖೆಗಳು, ಸಾರ್ವಜನಿಕರು ಹಾಗೂ ಯುವಜನತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಅಗತ್ಯವಿದ್ದು, ಯುವ ಸಮೂಹವನ್ನು ವ್ಯಸನದ ದುರಂತದಿಂದ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.