ಕನ್ನಡಪ್ರಭ ವಾರ್ತೆ ಮಡಿಕೇರಿ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದು, ಆ ನಿಟ್ಟಿನಲ್ಲಿ ಹೊಸ ಹೊಸ ಯೋಜನೆ ಅಳವಡಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಮತ್ತು ಆಡಳಿತ ವ್ಯವಸ್ಥೆಯನ್ನು ಸುಧಾರಿಸಲು ಅಗತ್ಯ ಕ್ರಮವಹಿಸಬೇಕಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎ.ಕೆ.ಮನುಮುತ್ತಪ್ಪ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರಕ್ಕೆ ಪ್ರತ್ಯೇಕ ಸಚಿವಾಲಯವನ್ನೇ ಸ್ಥಾಪಿಸಿ ಸಹಕಾರ ಕ್ಷೇತ್ರದ ಮಹತ್ವವನ್ನು ತಿಳಿದು ಸಹಕಾರ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಮನುಮುತ್ತಪ್ಪ ಮನವಿ ಮಾಡಿದರು.
ರಾಷ್ಟ್ರದ ಅಭಿವೃದ್ಧಿಗೆ ಸಹಕಾರ ಕ್ಷೇತ್ರಗಳು ಸಹ ಪ್ರಮುಖ ಪಾತ್ರ ವಹಿಸುತ್ತಿದ್ದು, ಸಹಕಾರ ಕ್ಷೇತ್ರಗಳು ಕೃಷಿ, ತೋಟಗಾರಿಕೆ, ಪಶುಪಾಲನೆ ಸೇರಿದಂತೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದೆ ಎಂದು ಮನುಮುತ್ತಪ್ಪ ವಿವರಿಸಿದರು.ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯವನ್ನು ಹೆಚ್ಚಿಸಿಕೊಂಡು ಸಹಕಾರ ಸಂಘಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಬೇಕಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರು ಹೇಳಿದರು.
ಮೈಸೂರಿನ ಎಂಸಿಪಿಸಿಎಸ್ ಸಹಕಾರ ಸಂಘ ಅಭಿವೃದ್ಧಿಗೆ ಭೋಸ್ ದೇವಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಜಲಜಾ ಶೇಖರ್ ಮಾತನಾಡಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಕಾಲ ಕಾಲಕ್ಕೆ ಅಪ್‌ಡೇಟ್ ಮಾಹಿತಿ ನೀಡುವ ಮೂಲಕ ಸಹಕಾರ ಸಂಘಗಳ ಬೆಳವಣಿಗೆಗೆ ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಪಿ.ಸಿ.ಮನು ರಾಮಚಂದ್ರ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರಾದ ರಮೇಶ್ ಚಂಗಪ್ಪ, ರವಿಬಸಪ್ಪ, ಪ್ರೇಮ ಸೋಮಯ್ಯ, ಪಿ.ಸಿ.ಅಚ್ಚಯ್ಯ, ಉಮೇಶ್ ಉತ್ತಪ್ಪ, ಕೃಷ್ಣಗಣಪತಿ, ಪಿ.ಬಿ.ಭರತ್, ಪಿ.ಬಿ.ಯತೀಶ್, ಕನ್ನಂಡ ಸಂಪತ್, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಮಂಜುಳಾ ಇತರರು ಇದ್ದರು.