ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭರವಸೆ ನೀಡಿದರು.ಪಟ್ಟಣದ ದ್ವಾರಕ ಫಂಕ್ಷನ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಚಿಕ್ಕಬಳ್ಳಾಪುರ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಈ ಲೋಕಸಭಾ ಚುನಾವಣೆಯ ಕಣದಲ್ಲಿದ್ದೇನೆ, ನನಗೆ ಅವಕಾಶ ನೀಡಿದರೆ ಬಾಗೇಪಲ್ಲಿಗೆ ರೈಲು ವ್ಯವಸ್ಥೆ, ಕೈಗಾರಿಕೆಗಳನ್ನು ತಂದು ನಿರೋದ್ಯೋಗಿ ಯುವಕರಿಗೆ ಉದ್ಯೋಗ ಅವಕಾಶಗಳನ್ನು ನೀಡುವುದಲ್ಲದೆ ಬಯಲು ಸೀಮೆ ಮತ್ತು ಈ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆಗಳನ್ನು ತರುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಭಾಗದಲ್ಲಿ ಜೆಡಿಎಸ್ ತನ್ನದೇ ಆದ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿದೆ, ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಬಿಜೆಪಿ ಪಕ್ಷದ ಅಭ್ಯರ್ಥಿಗೆ ಸಹಕರಿಸುವ ಮೂಲಕ ನರೇಂದ್ರ ಮೋದಿಜೀಯವರನ್ನು ಪ್ರಧಾನ ಮಂತ್ರಿಯನ್ನಾಗಿಸಲು ಶ್ರಮಿಸಬೇಕೆಂದು ಮನವಿ ಮಾಡಿದರು.ರಾಜ್ಯ ವಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ ಮಾತನಾಡಿ, ಸುಧಾಕರ್ ರವರು ಕೇವಲ 9 ವರ್ಷಗಳ ಅವಧಿಯಲ್ಲಿ 62 ಕೆರೆಗಳಿಗೆ ನೀರು ತುಂಬಿಸಿದ್ದಾರೆ, ಕೈಗಾರಿಕೆಗಳನ್ನು ಸ್ಥಾಪಿಸಿ ಯುವ ಜನತೆಗೆ ಉದ್ಯೋಗವಕಾಶಗಳನ್ನು ಕಲ್ಪಿಸಿದ್ದಾರೆ, ಇಂತಹ ವ್ಯಕ್ತಿಗೆ ಈ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ರಾಜ್ಯ ಮಹಿಳಾ ನಾಯಕಿ ಪುಷ್ಪಲತಾ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಬಿ.ಆರ್.ನರಸಿಂಹನಾಯ್ಡು, ಜೆಡಿಎಸ್ ತಾಲೂಕು ಅಧ್ಯಕ್ಷ ಸೂರ್ಯನಾರಾಯಣರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವಾರೆಡ್ಡಿ, ಗುಡಿಬಂಡೆ ತಾಲೂಕು ಅಧ್ಯಕ್ಷ ಮುರಳೀಕೃಷ್ಣ, ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಮತ್ತಿತರರು ಇದ್ದರು.