ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

KannadaprabhaNewsNetwork |  
Published : Feb 19, 2025, 12:46 AM IST
೧೭ಕೆಪಿಎಲ್‌80:ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಕೊಪ್ಪಳ ಜಿಲ್ಲಾಡಳಿತ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಕೊಪ್ಪಳ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ  ಒಂದು ದಿನದ ತರಬೇತಿ ಕಾರ್ಯಗಾರವನ್ನು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಜೀತ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ೧೯೭೬ರಲ್ಲಿ ಕಾಯ್ದೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜೀತ ಪದ್ಧತಿ ನಿಯಂತ್ರಣಗೊಳಿಸಿ ನಿರ್ಮೂಲನೆ ಮಾಡಲು ಜೀತ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಕೊಪ್ಪಳ:

ಜೀತ ಕಾರ್ಮಿಕ ಪದ್ಧತಿಯು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಇಂತಹ ಅಮಾನವೀಯ ಪದ್ಧತಿಯನ್ನು ಹೋಗಲಾಡಿಸಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಬೆಳಗಾವಿ (ಕೊಪ್ಪಳ ಘಟಕ) ಸ್ಪಂದನ ಸಂಸ್ಥೆಯ ಸಹಯೋಗದಲ್ಲಿ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನಾ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜೀತ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ೧೯೭೬ರಲ್ಲಿ ಕಾಯ್ದೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜೀತ ಪದ್ಧತಿ ನಿಯಂತ್ರಣಗೊಳಿಸಿ ನಿರ್ಮೂಲನೆ ಮಾಡಲು ಜೀತ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಜಿಲ್ಲಾಧಿಕಾರಿಯಿಂದ ಗ್ರಾಮ ಆಡಳಿತಾಧಿಕಾರಿವರೆಗಿನ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಜೀತ ಪದ್ಧತಿ ನಿರ್ಮೂಲನಾಧಿಕಾರಿಗಳು, ಜೀತ ಕಾರ್ಮಿಕ ಪ್ರಕರಣಗಳನ್ನು ಸೂಕ್ತ ಪ್ರಾಧಿಕಾರಕ್ಕೆ ವರದಿ ಮಾಡಬೇಕು. ಈ ಪದ್ಧತಿ ತಡೆಯಲು ಸಹ ಕ್ರಮವಹಿಸಬೇಕು. ಜೀತ ಪದ್ಧತಿಗೆ ಒತ್ತಾಯಿಸಿದ ಆರೋಪಿಗಳ ವಿರುದ್ಧ ಪರಿಣಾಮಕಾರಿಯಾಗಿ ಅಭಿಯೋಜನೆಗೆ ಒಳಪಡಿಸಲು ಸಾಕ್ಷ್ಯ ಸಂಗ್ರಹಣೆಗೆ ಸಹಕರಿಸಬೇಕು ಎಂದರು.

ಈ ವೇಳೆ ಎಸ್ಪಿ ಡಾ. ರಾಮ್ ಎಲ್ ಅರಸಿದ್ದಿ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ, ಮಾನವ ಕಳ್ಳ ಸಾಗಾಣಿಕೆ ಮತ್ತು ಜೀತ ಕಾರ್ಮಿಕ ಪದ್ಧತಿಯ ರಾಜ್ಯ ಉನ್ನತ ಸಮಿತಿ ಸದಸ್ಯರಾದ ವಿಲಿಯಂ ಕ್ರಿಸ್ಟೋಪರ್, ಯೂನಿಸೆಫ್ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್, ಯೂನಿಸೆಫ್ ಸಂಯೋಜಕ ಹರೀಶ ಜ್ಯೋಗಿ, ಬೆಳಗಾವಿ ಸ್ಪಂದನ ಸಂಸ್ಥೆಯ ಕಾರ್ಯದರ್ಶಿ ವಿ. ಸುಶೀಲ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ವಿಲಿಯಂ ಕ್ರಿಸ್ಟೋಪರ್ ಅವರು ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು, ರಾಘವೇಂದ್ರ ಭಟ್ ಅವರು ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಬಗ್ಗೆ ಹಾಗೂ ಹರೀಶ ಜ್ಯೋಗಿ ಅವರು ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ತರಬೇತಿ ನೀಡಿದರು. ಕೊಪ್ಪಳ ಜಿಲ್ಲೆಯ ಜೀತ ಪದ್ಧತಿ ನಿರ್ಮೂಲನಾಧಿಕಾರಿಗಳು ಭಾಗವಹಿಸಿದ್ದರು.

PREV

Recommended Stories

ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​