ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ಷಯರೋಗ ದಿನಾಚರಣೆ ಹಾಗೂ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಿಗೆ ಘೋಷಣಾ ಪತ್ರ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಪ್ರಪಂಚದಲ್ಲಿ ಪತ್ತೆಯಾಗುವ ಕ್ಷಯರೋಗ ಪೈಕಿ ಶೇ. 27ರಷ್ಟು ನಮ್ಮ ದೇಶದಲ್ಲೇ ಕಂಡು ಬರುತ್ತಿದೆ. ಜಿಲ್ಲೆಯಲ್ಲೂ ಕ್ಷಯರೋಗದ ಪ್ರಕರಣಗಳು ಇಳಿಮುಖವಾಗಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರವೂ ಅತ್ಯಂತ ಮುಖ್ಯವಾಗಿದ್ದು, ಮತ್ತಷ್ಟು ಪರಿಣಾಮಕಾರಿಯಾಗಿ ಕ್ಷಯರೋಗ ಪ್ರಕರಣಗಳು ಕಡಿಮೆಯಾಗಲು ಕಾರ್ಯನಿರ್ವಹಿಸಬೇಕು ಎಂದರು.ಕ್ಷಯಮುಕ್ತ ಗ್ರಾಮ ಪಂಚಾಯಿತಿ ಘೋಷಣೆಗೆ 35 ಗ್ರಾಮ ಪಂಚಾಯಿತಿಗಳು ಮೊದಲನೆ ಬಾರಿಗೆ, 15 ಗ್ರಾಮ ಪಂಚಾಯಿತಿಗಳು ಎರಡನೇ ಬಾರಿಗೆ ಹಾಗೂ 5 ಗ್ರಾಮ ಪಂಚಾಯಿತಿಗಳು ಮೂರನೇ ಬಾರಿಗೆ ಆಯ್ಕೆಯಾಗಿವೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿ. ಕ್ಷಯರೋಗ ನಿರ್ಮೂಲನೆಗೆ ನಿರಂತರ ಪ್ರಯತ್ನ ನಡೆಯಲಿ. ಕ್ಷಯಮುಕ್ತ ಗ್ರಾಮ ಪಂಚಾಯಿತಿ ಅರ್ಹತೆ ಹೊಂದಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಎಂ.ಎಸ್. ರವಿಕುಮಾರ್ ಅವರು ಮಾತನಾಡಿ, ದೇಶದಲ್ಲಿ ಪ್ರತಿವರ್ಷ 27 ಲಕ್ಷಕ್ಕೂ ಹೆಚ್ಚು ಕ್ಷಯರೋಗ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 2024ರಲ್ಲಿ 35 ಗ್ರಾಮ ಪಂಚಾಯಿತಿಗಳನ್ನು ಕ್ಷಯಮುಕ್ತ ಎಂದು ಘೋಷಿಸಲಾಗಿತ್ತು. 2025ರಲ್ಲಿ 55 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತವೆಂದು ಘೋಷಿಸಿ ಪ್ರಮಾಣ ಪತ್ರ ಪಡೆಯುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಘೋಷಣಾ ಪತ್ರವನ್ನು ಗಣ್ಯರು ವಿತರಿಸಿದರು. ಇದೇ ಸಂದರ್ಭದಲ್ಲಿ ಎಚ್.ಐ.ವಿ ಸ್ಥಿತಿಯನ್ನು ತಿಳಿದುಕೊಳ್ಳುವ ಮಿಷನ್ ಏಡ್ಸ್ ಸುರಕ್ಷತಾ ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು.ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಸುಂದರೇಶ್, ಡಾ. ರಾಜೇಶ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ರಾಜೀವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.