ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ
ಕನ್ನಡಪ್ರಭ ವಾರ್ತೆ ಗದಗ
ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಕಂಡು ಬರುತ್ತಿದ್ದು. ಅದರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಕಂಡು ಬರುತ್ತಿರುವುದು ಕಳವಳಕಾರಿ. ಜೀವನ ಅತ್ಯಮೂಲ್ಯ. ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ಯಾರು ಪ್ರಯತ್ನಿಸಿ ಯಶಸ್ವಿಯಾಗುತ್ತಾರೋ ಅವರು ದೇವರ ಕೆಲಸ ಮಾಡಿದ ಹಾಗೆ. ಎಲ್ಲರೂ ಆತ್ಮಹತ್ಯೆಗಳನ್ನು ತಡೆಗಟ್ಟುವಲ್ಲಿ ಶ್ರಮಿಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ ತಿಳಿಸಿದರು.ನಗರದ ಡಿ.ಜಿ.ಎಂ ಆರ್ಯುವೇದಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಾಕ್ರಮ, ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಸಂಯುಕ್ತಾಶ್ರಯದಲ್ಲಿ ಜರುಗಿದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಿಎಚ್‌ಒ ಡಾ. ಎಸ್.ಎಸ್. ನೀಲಗುಂದ ಮಾತನಾಡಿ, ವಿಶ್ವದಲ್ಲಿ ಪ್ರತಿ 40 ಸೆಕೆಂಡಿಗೊಂದು ಆತ್ಮಹತ್ಯೆ ಅಂದರೆ ಪ್ರತಿದಿನ 7 ಲಕ್ಷಕ್ಕೂ ಹೆಚ್ಚು ಜನ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ನಮ್ಮ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆಗೆ ಹಲವಾರು ಕಾರಣಗಳಿದ್ದು ಅದರಲ್ಲಿ ಕೌಟುಂಬಿಕ ಸಮಸ್ಯೆ, ಪ್ರೀತಿ ಪ್ರೇಮಕ್ಕೆ ಸಂಬಂಧಿಸಿದ ಸಮಸ್ಯೆ. ಸಮಸ್ಯೆ ನಿಭಾಯಿಸಲು ಬೇಕಾದ ಜೀವನ ಕೌಶಲ್ಯಗಳ ಕೊರತೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಿಳಿಸಿದರು.
ಮನೋ ವೈದ್ಯ ಡಾ. ಶ್ಯಾಮಸುಂದರ ಬಾಲೆಹೊಸುರ ಅವರು, ಆತ್ಮಹತ್ಯೆಯ ವ್ಯಾಖ್ಯಾನ, ಕಾರಣ ಹಾಗೂ ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ವಿವರವಾಗಿ ತಿಳಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ ಚವ್ಹಾಣ ಪ್ರತಿಜ್ಞಾ ವಿಧಿ ಬೋಧಿಸಿದರು.